ಬೆಂಗಳೂರು: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವುದರಿಂದ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಕರ್ನಾಟಕ ರಾಜ್ಯದಾದ್ಯಂತ ವಿಶೇಷ ಸಂಚಾರಿ ಕಾರ್ಯಾಚರಣೆ ನಡೆಸಲು ಪೊಲೀಸರಿಗೆ ಸೂಚನೆ ನೀಡಲಾಗಿದೆ.

ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಧೀಶರು ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ರಸ್ತೆ ಸುರಕ್ಷತಾ ಸಮಿತಿಯ ಅಧ್ಯಕ್ಷರಾದ ಅಭಯ್ ಮನೋಹರ್ ಸಪ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ರಸ್ತೆ ಸುರಕ್ಷತೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ವಿಶೇಷವಾಗಿ ಹೊಸ ವರ್ಷದ ಆಚರಣೆಯ ಸಂದರ್ಭಗಳಲ್ಲಿ ಮದ್ಯಪಾನ ಮಾಡಿ ಅಪಘಾತಕ್ಕೀಡಾಗಿ, ಮೃತಪಟ್ಟವರ ಹಾಗೂ ಗಾಯಗೊಂಡವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂತಹ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ರಾಜ್ಯದ ಎಲ್ಲಾ ಘಟಕಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಲಾಗಿದೆ.

ಈ ಸೂಚನೆಯ ಮೇರೆಗೆ, ರಾಜ್ಯದ ಎಲ್ಲಾ ಘಟಕಾಧಿಕಾರಿಗಳು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳ ಮೂಲಕ 24.12.2025 ರಿಂದ 31.12.2025ರವರೆಗೆ ವಿಶೇಷ ಸಂಚಾರಿ ಕಾರ್ಯಾಚರಣೆ (Special Drive) ನಡೆಸಲಿದ್ದಾರೆ. ಈ ಕಾರ್ಯಾಚರಣೆಯ ವೇಳೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಮಾತ್ರವಲ್ಲದೇ, ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ, ಸೀಟ್ ಬೆಲ್ಟ್ ಧರಿಸದೆ ಇರುವುದು, ಅತೀವೇಗವಾಗಿ ವಾಹನ ಚಲಾಯಿಸುವುದು, ವೀಲಿಂಗ್ ಹಾಗೂ ತ್ರಿಬಲ್ ರೈಡಿಂಗ್, ವಾಹನ ಚಾಲನೆಯ ವೇಳೆ ಮೊಬೈಲ್ ಬಳಸುವುದು ಇತ್ಯಾದಿ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಹೀಗಾಗಿ ಸಾರ್ವಜನಿಕರು ಸಂಚಾರ ನಿಯಮಗಳನ್ನು ಪಾಲಿಸಿ, ರಸ್ತೆ ಸುರಕ್ಷತೆಗೆ ಸಹಕರಿಸಬೇಕೆಂದು ಪೊಲೀಸ್ ಇಲಾಖೆ ಮನವಿ ಮಾಡಿಕೊಂಡಿದೆ.










