ಬೆಂಗಳೂರು: ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯದಿಂದ ಅಮಾನತಾದ ಪೊಲೀಸ್ ಅಧಿಕಾರಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಪವನ್ ನೆಜ್ಜೂರ್ ತಮ್ಮ ಸ್ನೇಹಿತನ ಫಾರ್ಮ್ ಹೌಸ್ನಲ್ಲಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಕೆಲ ಮಾಧ್ಯಮಗಳು ವರದಿ ಮಾಡುತ್ತಿದ್ದು, ಈ ಬಗ್ಗೆ ಯಾವುದೇ ಅಧೀಕೃತ ಮಾಹಿತಿ ಹೊರ ಬಿದ್ದಿಲ್ಲ. ಈ ವಿಚಾರ ಸುಳ್ಳೋ ಸತ್ಯವೋ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ಹಿನ್ನೆಲೆ ಏನು..?
ಗಂಗಾವತಿ ಶಾಸಕ ಜನಾರ್ದನ ರೆಡ್ಡಿ (Janardhana Reddy) ಅವರ ಬಳ್ಳಾರಿಯ ಮನೆಯ ಮುಂದೆ ನಡೆದ ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಘರ್ಷಣೆ ಸಮಯದಲ್ಲಿ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ ಎನ್ನುವ ಕಾರಣಕ್ಕೆ ಬಳ್ಳಾರಿಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಒಂದು ದಿನದ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದ ಪವನ್ ನೆಜ್ಜೂರ್ ಅವರನ್ನು ರಾಜ್ಯ ಸರ್ಕಾರ ನಿನ್ನೆ ಅಮಾನತು ಮಾಡಿತ್ತು.

ಬಳ್ಳಾರಿ ರೇಂಜ್ ಡಿಐಜಿ ಅವರು ಪೊಲೀಸ್ ವರಿಷ್ಠಾಧಿಕಾರಿಯಾಗಿ ಪವನ್ ನೆಜ್ಜೂರ್ ಈ ಪ್ರಕರಣವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿಲ್ಲ. ಹೀಗಾಗಿ ಇವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ವರದಿ ನೀಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪವನ್ ನೆಜ್ಜೂರ್ ಅವರನ್ನು ಅಮಾನತುಗೊಳಿಸಿ ಸರ್ಕಾರ ಆದೇಶ ಪ್ರಕಟಿಸಿತ್ತು.






