ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕೆ.ಎನ್. ರಾಜಣ್ಣ(KN Rajanna) ಅವರು ತಮ್ಮ ರಾಜಕೀಯ ನಿಲುವಿನ ಬಗ್ಗೆ ಸ್ಪಷ್ಟನೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ(KPCC President) ಬಯಕೆ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷ ಸ್ಥಾನ ದೊರೆತರೆ ಸಚಿವ ಸ್ಥಾನವನ್ನು ಬಿಡುತ್ತೇನೆ ಎಂದು ನಾನು ಸಚಿವನಾಗಿದ್ದಾಗಲೇ ಹೇಳಿದ್ದೆ. ಈಗ ಬಿಡಲು ಯಾವುದೇ ಸ್ಥಾನವೇ ಇಲ್ಲ. ನಾನು ಕೆಪಿಸಿಸಿ ಅಧ್ಯಕ್ಷನಾದರೆ ಪಕ್ಷ ಸಂಘಟನೆಗೆ ಸಂಪೂರ್ಣವಾಗಿ ಒತ್ತು ನೀಡುತ್ತೇನೆ. ಈ ಕುರಿತು ಹೈಕಮಾಂಡ್‌ಗೆ ಈಗಾಗಲೇ ಮಾಹಿತಿ ನೀಡಿದ್ದೇನೆ ಎಂದು ಹೇಳಿದರು.

ಸಂಪುಟ ಪುನಾರಚನೆ ನಡೆದರೆ ಮತ್ತೆ ಸಚಿವರಾಗುವಿರಾ? ಎಂಬ ಪ್ರಶ್ನೆಗೆ ಉತ್ತರಿಸಿದ ರಾಜಣ್ಣ, ಸಚಿವನಾಗಿದ್ದರೂ ನಾನು ಹೀಗೆ ಇದ್ದೇನೆ, ಇಲ್ಲದಿದ್ದರೂ ಹೀಗೆ ಇರುತ್ತೇನೆ. ನಾನು ಯಾವತ್ತೂ ಅಧಿಕಾರಕ್ಕಾಗಿ ಹುಡುಕಿಕೊಂಡು ಹೋದವನಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷದ ಒಳಗಿನ ಸಂಘಟನೆ ಬಲಪಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಅವರು, ಕೆಪಿಸಿಸಿ ಮಟ್ಟದಲ್ಲಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟನಾತ್ಮಕವಾಗಿ ಮತ್ತಷ್ಟು ಬಲಿಷ್ಠಗೊಳಿಸುವುದೇ ತಮ್ಮ ಉದ್ದೇಶ ಎಂದು ರಾಜಣ್ಣ ತಿಳಿಸಿದರು. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ ರಾಜಣ್ಣ ಅವರ ಈ ಹೇಳಿಕೆಗಳು ಕಾಂಗ್ರೆಸ್ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಹಾಗೂ ಭವಿಷ್ಯದ ಪಕ್ಷ ಸಂಘಟನೆ ಕುರಿತು ರಾಜಣ್ಣ ತಮ್ಮ ಆದ್ಯತೆ ಇಟ್ಟುಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.











