ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Yash) ನಟನೆಯ ಬಹು ನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ (Toxic) ಟೀಸರ್ ಬಿಡುಗಡೆಯಾದ ದಿನದಿಂದ ಭಾರೀ ವಿವಾದಕ್ಕೆ ಕಾರಣವಾಗಿದೆ. ಜನವರಿ 08ರಂದು ಬಿಡುಗಡೆಯಾದ ಟೀಸರ್‌ಗೆ ಸೋಶಿಯಲ್ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿದ್ದು, ಇದೀಗ ಸಿನಿಮಾ ವಿರುದ್ಧ ಅಧಿಕೃತ ದೂರುಗಳ ಸರಣಿ ಆರಂಭವಾಗಿದೆ.

‘ಟಾಕ್ಸಿಕ್’ ಟೀಸರ್‌ನಲ್ಲಿ ಅಶ್ಲೀಲ ಹಾಗೂ ಸಾಮಾಜಿಕ ನೈತಿಕತೆಗೆ ವಿರುದ್ಧವಾದ ದೃಶ್ಯಗಳಿವೆ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಮಹಿಳಾ ಆಯೋಗ, ಮಕ್ಕಳ ಆಯೋಗ ಮತ್ತು ಇದೀಗ ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳಿ (CBFC / ಸೆನ್ಸಾರ್ ಮಂಡಳಿ)ಗೆ ದೂರುಗಳು ದಾಖಲಾಗಿವೆ.

ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಅವರು ‘ಟಾಕ್ಸಿಕ್’ ಸಿನಿಮಾದ ಟೀಸರ್ ವಿರುದ್ಧ ಸಿಬಿಎಫ್‌ಸಿಗೆ ದೂರು ಸಲ್ಲಿಸಿದ್ದು, ಚಿತ್ರಕ್ಕೆ ಯಾವುದೇ ಪ್ರಮಾಣಪತ್ರ ನೀಡಬಾರದೆಂದು ಆಗ್ರಹಿಸಿದ್ದಾರೆ. ಟೀಸರ್‌ನಲ್ಲಿ ಲೈಂಗಿಕವಾಗಿ ಪ್ರಚೋದಿಸುವ ಹಾಗೂ ಅಶ್ಲೀಲ ದೃಶ್ಯಗಳಿದ್ದು, ಅಪ್ರಾಪ್ತ ವಯಸ್ಕರ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಜೊತೆಗೆ, ಟೀಸರ್ ಸಾಮಾಜಿಕ ನೈತಿಕತೆಯ ಮಿತಿಯನ್ನು ಮೀರಿದ್ದು, ಕೂಡಲೇ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆದುಹಾಕಬೇಕು. ಈ ಸಂಬಂಧ ಚಿತ್ರದ ನಿರ್ದೇಶಕರು ಮತ್ತು ನಿರ್ಮಾಪಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದಕ್ಕೂ ಮೊದಲು, ಕರ್ನಾಟಕ ಆಮ್ ಆದ್ಮಿ ಪಕ್ಷ (AAP) ಮಹಿಳಾ ಘಟಕವು ‘ಟಾಕ್ಸಿಕ್’ ಚಿತ್ರದ ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ದಾಖಲಿಸಿತ್ತು. ಟೀಸರ್‌ನಲ್ಲಿರುವ ಕೆಲವು ದೃಶ್ಯಗಳು ಅಶ್ಲೀಲವಾಗಿದ್ದು, ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿವೆ. ಯಾವುದೇ ವಯೋಮಾನದ ಎಚ್ಚರಿಕೆ ಇಲ್ಲದೆ ಸಾರ್ವಜನಿಕ ವಲಯದಲ್ಲಿ ಬಿಡುಗಡೆಯಾದ ಈ ದೃಶ್ಯಗಳು ಮಹಿಳೆಯರ ಘನತೆಯನ್ನು ಕುಗ್ಗಿಸುತ್ತವೆ ಮತ್ತು ಕನ್ನಡ ಸಂಸ್ಕೃತಿಯನ್ನು ಅವಮಾನಿಸುತ್ತವೆ ಎಂದು ಎಎಪಿ ರಾಜ್ಯ ಕಾರ್ಯದರ್ಶಿ ಉಷಾ ಮೋಹನ್ ಅವರು ದೂರಿನಲ್ಲಿ ತಿಳಿಸಿದ್ದಾರೆ.

ಇನ್ನೊಂದೆಡೆ ಮಕ್ಕಳ ಆಯೋಗ ಕೂಡ ಸ್ವಯಂಪ್ರೇರಿತವಾಗಿ ಈ ವಿಷಯವನ್ನು ಕೈಗೆತ್ತಿಕೊಂಡಿದ್ದು, ಟೀಸರ್‌ನಲ್ಲಿರುವ ದೃಶ್ಯಗಳು ಮಕ್ಕಳ ಮೇಲೆ ಬೀರುವ ಪರಿಣಾಮಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ‘ಟಾಕ್ಸಿಕ್’ ಟೀಸರ್ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡುತ್ತಿದ್ದು, ಈಗಾಗಲೇ 300 ಮಿಲಿಯನ್‌ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದೆ.











