ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ( Jammu Kashmir) ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ(Accident) ಭಾರತೀಯ ಸೇನೆಯ 10 ಮಂದಿ ಯೋಧರು ಹುತಾತ್ಮರಾಗಿದ್ದು, ಇನ್ನೂ 9 ಮಂದಿ ಯೋಧರು ಗಾಯಗೊಂಡಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ.

ದೋಡಾ ಜಿಲ್ಲೆಯ ಭದೇರ್ವಾ–ಚಂಬಾ ಅಂತಾರಾಜ್ಯ ರಸ್ತೆಯ ಖನ್ನಿ ಟಾಪ್ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಎತ್ತರದ ಪೋಸ್ಟ್ ಕಡೆಗೆ ತೆರಳುತ್ತಿದ್ದ ಸೇನಾ ವಾಹನವು ಚಾಲಕನ ನಿಯಂತ್ರಣ ತಪ್ಪಿ ಸುಮಾರು 200 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ನೀಲಿ ಚಿತ್ರ ವೀಕ್ಷಿಸಿ ರಾಜ್ಯದ ಮಾನ ಕಳೆದವರು ಯಾರು?: ರೌಡಿ ಎಂದವರಿಗೆ ಬಿ.ಕೆ ಹರಿಪ್ರಸಾದ್ ತಿರುಗೇಟು
ಅಪಘಾತದ ವೇಳೆ ಸೇನಾ ವಾಹನದಲ್ಲಿ ಒಟ್ಟು 17 ಮಂದಿ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಅಪಘಾತ ಸಂಭವಿಸಿದ ಕೂಡಲೇ ಭಾರತೀಯ ಸೇನೆ ಮತ್ತು ಸ್ಥಳೀಯ ಪೊಲೀಸರು ಜಂಟಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಪ್ರಾಥಮಿಕ ಪರಿಶೀಲನೆಯಲ್ಲೇ ನಾಲ್ವರು ಯೋಧರು ಸ್ಥಳದಲ್ಲೇ ಮೃತಪಟ್ಟಿರುವುದು ದೃಢಪಟ್ಟಿತ್ತು. ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಇನ್ನೂ ಆರು ಮಂದಿ ಯೋಧರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಗಾಯಗೊಂಡಿರುವ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದ್ದು, ಅವರಲ್ಲಿ ಮೂರು ಮಂದಿ ಯೋಧರು ಗಂಭೀರ ಸ್ಥಿತಿಯಲ್ಲಿದ್ದಾರೆ. ಗಂಭೀರವಾಗಿ ಗಾಯಗೊಂಡ ಯೋಧರನ್ನು ಹೆಚ್ಚಿನ ಚಿಕಿತ್ಸೆಗೆ ಉಧಮ್‌ಪುರದ ಮಿಲಿಟರಿ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ಸಾಗಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಉಳಿದ ಗಾಯಾಳುಗಳಿಗೆ ಸಮೀಪದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.












