ಬೆಂಗಳೂರು: ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ಲೋಕಭವನ ಚಲೋ ನಡೆಸಲಾಗುವುದು. ಪ್ರತಿ ತಾಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DCM DK Shivakumar) ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 20 ವರ್ಷಗಳ ಹಿಂದೆ ಸೋನಿಯಾಗಾಂಧಿ ಅವರ ನಾಯಕತ್ವದಲ್ಲಿ ಮನಮೋಹನ್ ಸಿಂಗ್ ಅವರ ಸರ್ಕಾರ ಜಾರಿಗೆ ತಂದಿದ್ದ ಸಾಂವಿಧಾನಿಕ ಹಕ್ಕಾಗಿ ಬಂದಿರುವ ಮನರೇಗಾವನ್ನು ನಾಶ ಮಾಡಲು ಹೊರಟಿರುವುದು ನಮಗೆಲ್ಲಾ ಆಶ್ಚರ್ಯ ಉಂಟು ಮಾಡಿದೆ. ಮಹಾತ್ಮಗಾಂಧಿ ಅವರ ಹೆಸರಿನಲ್ಲಿ ಪ್ರಾರಂಭವಾದ ಯೋಜನೆ ಗ್ರಾಮೀಣ ಭಾಗದ ಜನರ ಉದ್ಯೋಗದ ಹಕ್ಕಿಗೆ ಖಾತ್ರಿ ನೀಡಿತ್ತು. ಆದರೆ ಈ ಹಕ್ಕು ಈಗ ಮೊಟಕಾಗಿದೆ. ಆದಕಾರಣ ಇಡೀ ದೇಶದ ಉದ್ದಗಲಕ್ಕೂ ಈ ಬಗ್ಗೆ ಹೋರಾಟ ರೂಪಿಸಲಾಗಿದೆ ಎಂದರು.

ನಾವು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಬೇಕಿತ್ತು. ಆದರೆ ನಾವು ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ. ನಮ್ಮ ಎಲ್ಲಾ ಶಾಸಕರು, ಪರಿಷತ್ ಸದಸ್ಯರು ಕಡ್ಡಾಯವಾಗಿ ಭಾಗವಹಿಸಬೇಕು. ಈ ಹೋರಾಟ ಪ್ರತಿ ಪಂಚಾಯ್ತಿಯಲ್ಲಿರುವ ನರೇಗಾ ಉದ್ಯೋಗ ಕಾರ್ಡ್ ಹೊಂದಿರುವವರಿಗೆ ಈ ಹೋರಾಟ ತಲುಪಬೇಕು. ರಾಜ್ಯ, ಜಿಲ್ಲೆ ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ ಈ ಪ್ರತಿಭಟನೆ ನಡೆಸಲಾಗುವುದು. ನರೇಗಾ ಕಾರ್ಮಿಕರ ಜೊತೆಗೆ ಪಂಚಾಯಿತಿಗಳ ಹಾಲಿ, ಮಾಜಿ ಸದಸ್ಯರುಗಳು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಲಿದ್ದಾರೆ. ಜಿಲ್ಲಾ ಮಂತ್ರಿಗಳು ಹಾಗೂ ಶಾಸಕರ ನೇತೃತ್ವದಲ್ಲಿ ಈ ಪಾದಯಾತ್ರೆ ನಡೆಯಬೇಕು. ಎಲ್ಲಿ ಶಾಸಕರಿಲ್ಲವೋ ಅಲ್ಲಿ ವಿಧಾನ ಪರಿಷತ್ ಸದಸ್ಯರನ್ನು ನೇಮಿಸಲಾಗಿದೆ ಎಂದರು.

ಪ್ರತಿವರ್ಷ 6 ಸಾವಿರ ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳು ಮನರೇಗಾ ಅಡಿ ನಡೆಯುತ್ತಿದ್ದವು. ಗ್ರಾಮೀಣ ಭಾಗದ ಜನರಿಗೆ ಉದ್ಯೋಗ ದೊರೆಯುತ್ತಿತ್ತು. ವಿಧಾನಸಭೆಯಲ್ಲೂ ಇದರ ಬಗ್ಗೆ ಪ್ರತಿಭಟನೆ ಹಾಗೂ ನಿರ್ಣಯ ತೆಗೆದುಕೊಳ್ಳಲು ನಾವು ಸಜ್ಜಾಗಿದ್ದೇವೆ. ಮನರೇಗಾ ಮರು ಸ್ಥಾಪಿಸುವವರೆಗೂ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಹೋರಾಟ ಮಾಡಲಾಗುವುದು ಎಂದರು.

ಗ್ರಾಮ್ ಜಿ ಕಾಯ್ದೆ ಹಿಂಪಡೆಯುವವರೆಗೆ ಹೋರಾಟ
ಮಾತು ಮುಂದುವರಿಸಿದ ಅವರು, ಮನರೇಗಾವನ್ನು ನಾಶ ಮಾಡುವ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಲಾಗುವುದು. ರೈತರ ಕರಾಳ ಕಾಯ್ದೆಗಳನ್ನು ಹೇಗೆ ಹಿಂಪಡೆಯಲಾಯಿತೋ ಅದೇ ರೀತಿ ಇದನ್ನೂ ಹಿಂಪಡೆಯಬೇಕು. ಹಿಂಪಡೆಯುವವರೆಗೂ ಹೋರಾಟ ಮುಂದುವರೆಸಲಾಗುವುದು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೂ ಸಹ ಬಾಯಿ ಬಿಡುತ್ತಿಲ್ಲ. ಹೊಸ ಕಾಯ್ದೆಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ. ಗ್ರಾಮೀಣ ಭಾಗದ ಜನಪ್ರತಿನಿಧಿಯಾಗಿ ನನ್ನ ಅನುಭವದಲ್ಲಿ ಹೇಳುವುದಾದರೆ ಇದರ ಅನುಷ್ಠಾನ ಅಸಾಧ್ಯ. ಈ ಯೋಜನೆಗೆ ಅನುದಾನ ಒದಗಿಸಿ ಕೊಡುವವರು ಯಾರು? ಕೇಂದ್ರವೇ ಅನುದಾನ ಒದಗಿಸಿಕೊಡಲಿ. ಕೆಲವು ನಾಯಕರು ಚರ್ಚೆಗೆ ಬರುತ್ತೇವೆ ಎಂದು ಹೇಳಿದ್ದಾರೆ. ನಾವು ಸದನದಲ್ಲಿ ಅವರ ಚರ್ಚೆಗೆ ಉತ್ತರ ನೀಡಲು ಸಿದ್ಧರಿದ್ದೇವೆ ಎಂದು ಹೇಳಿದರು.












