ಬೆಂಗಳೂರು : ಯಾರು ಮುಖ್ಯಮಂತ್ರಿ ಆಗಬೇಕು ಎಂಬ ಬಗ್ಗೆ ಚರ್ಚೆ ಮಾಡುವ ಸಮಯ ಇದಲ್ಲ. ಅದಕ್ಕೆ ಇನ್ನೂ ಸಮಯ ಇದೆ. ಈಗಲೇ ಮಾತನಾಡಿದರೆ ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲೆಸಿದಂತೆ ಆಗುತ್ತದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

ನಗರದ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ನಾವು ಇನ್ನೂ ಮಾಡಬೇಕಾದ ಕೆಲಸ ಬೇಕಾದಷ್ಟಿದೆ. ಈಗಲೇ ಅದರ ಬಗ್ಗೆ ಮಾತನಾಡುವುದು ಸರಿಯಲ್ಲ. ರಾಜ್ಯದಲ್ಲಿ ಅತ್ಯಂತ ಕೆಟ್ಟ ಸರಕಾರ ಇದೆ. ಅದನ್ನು ತೊಲಗಿಸಿ ಜನಪರ ಸರಕಾರ ತರಬೇಕು ಎನ್ನುವುದು ನನ್ನ ಉದ್ದೇಶ. ಈ ಭ್ರಷ್ಟ ಕೆಟ್ಟ ಸರಕಾರವನ್ನು ತೆಗೆಯುವುದೇ ನನ್ನ ಅಜೆಂಡಾ. ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಎರಡೂ ಸೇರಿ ಈ ಕೆಲಸ ಮಾಡುತ್ತೇವೆ ಎಂದರು.
ಇದನ್ನೂ ಓದಿ : ದಾಯಾದಿಗಳ ಮುನಿಸು..ಕ್ರಿಕೆಟ್ ಜಗತ್ತಿಗೆ ಕಾಸು.. !
ನಾನು ಇಲ್ಲಿವರೆಗೂ ನಿಮ್ಮ ಮುಂದೆ (ಪತ್ರಕರ್ತರು) ಅನೇಕ ಸಲ ಹೇಳಿದ್ದೇನೆ. ರಾಜ್ಯದಲ್ಲಿ ಇರುವ ಜನ ವಿರೋಧಿ ಸರ್ಕಾರ ತೆಗೆಯಬೇಕು ಎನ್ನುವುದು ನನ್ನ ಉದ್ದೇಶವಾಗಿದೆ. ಮೊದಲಿನಿಂದಲೂ ಇದನ್ನೇ ಹೇಳುತ್ತಿದ್ದೇನೆ. ಕೆಲವರು ಮೈತ್ರಿ, ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡುತ್ತಿದ್ದಾರೆ. ಅವರಿಗೆ ಉತ್ತರ ಕೊಡಬೇಕು ಎಂದು ನನಗೆ ಅನಿಸುತ್ತಿಲ್ಲ. ಒಂದು ವೇಳೆ ನಾನು ಅವರಿಗೆಲ್ಲಾ ಉತ್ತರ ಕೊಡುತ್ತಾ ಹೋದರೆ ನನಗೆ ಪ್ರಬುದ್ಧತೆ ಇಲ್ಲ ಎಂದು ಜನ ಅಂದುಕೊಳ್ಳುತ್ತಾರೆ. ಹೀಗಾಗಿ ನಾನು ಆ ಬಗ್ಗೆ ಮಾತಾಡುವುದಿಲ್ಲ. ಒಟ್ಟಾಗಿ ಮೈತ್ರಿಕೂಟವನ್ನು ಬಲಪಡಿಸುತ್ತೇವೆ, ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಜನಪರ ಸರಕಾರ ತರುತ್ತೇವೆ ಎಂದು ಕುಮಾರಸ್ವಾಮಿ ತಿಳಿಸಿದರು.
ಕೆಲ ವ್ಯಕ್ತಿಗಳ ಹೇಳಿಕೆ ಬಗ್ಗೆ ನಾನು ಚರ್ಚೆ ಮಾಡಲು ಹೋಗಲ್ಲ. ಒಂದೊಂದು ಪಕ್ಷದಲ್ಲಿ ಒಂದೊಂದು ರೀತಿ ಚರ್ಚೆ ಮಾಡುತ್ತಾರೆ. ಇದೇ ಅಂತಿಮ ಅಲ್ಲ. ವಿಧಾನಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಇದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇನ್ನೂ ನಾಲ್ಕೈದು ತಿಂಗಳು ಇದೆ. ಉಳಿದಂತೆ ಸ್ಥಳೀಯ ಸಂಸ್ಥೆಗಳು ಅಥವಾ ಗ್ರೇಟರ್ ಬೆಂಗಳೂರು ಚುನಾವಣೆಗೆ ಸಂಬಂಧಿಸಿದಂತೆ ಈವರೆಗೆ ಎರಡೂ ಪಕ್ಷಗಳ ನಡುವೆ ಮಾತುಕತೆ ನಡೆದಿಲ್ಲ. ಸಮಯ ಬಂದಾಗ ಖಂಡಿತಾ ಚರ್ಚೆ ಮಾಡುತ್ತೇವೆ ಎಂದು ದಳಪತಿ ಹೇಳಿದರು.
ಮೈತ್ರಿ ವಿಚಾರದಲ್ಲಿ ನಾನು, ನಮ್ಮ ಪಕ್ಷ ಮುಕ್ತವಾಗಿದ್ದೇವೆ. ಸಂದರ್ಭ ಬಂದಾಗ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಮೈತ್ರಿ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ, ಮುಂದೆಯೂ ಗೊಂದಲ ಆಗುವುದಿಲ್ಲ. ಇದು ನನ್ನ ನಿಲುವು. ಚುನಾವಣೆಗೆ ಎಲ್ಲಾ ಪಕ್ಷಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ. ಅದರಂತೆ ನಾವು ಕೂಡ ತಯಾರಿ ಮಾಡಿಕೊಳ್ಳುತ್ತಿದ್ದೇವೆ. ನಿರಂತರವಾಗಿ ಸಭೆಗಳನ್ನು ಮಾಡುತ್ತಿದ್ದೇವೆ. ಇವತ್ತಿನ ಸಭೆಯಲ್ಲಿಯೂ ನಾವು ಮೈತ್ರಿ ವಿಷಯದ ಬಗ್ಗೆ ಚರ್ಚೆ ನಡೆಸಿಲ್ಲ. ಆ ಸಂದರ್ಭ ಬಂದಾಗ ಸಮಾಲೋಚನೆ ನಡೆಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.

ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ಹೊರಟಿದ್ದರಲ್ಲಾ ಎಂಬ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು; ಅವರು ಎಲ್ಲಿಗಾದರೂ ಹೋಗಲಿ, ಅಧ್ಯಯನ ಮಾಡುವುದಕ್ಕೆ ಹೋದರೆ ಹೋಗಲಿ. ಆದರೆ ಜನರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ನೀಡಲಿ ಎಂದು ಕೇಂದ್ರ ಸಚಿವರು ಒತ್ತಾಯ ಮಾಡಿದರು.
ಜಿಬಿಎ ಚುನಾವಣೆಗೆ ಸಿದ್ಧತೆ ನಡೆಸಿದೆ..
ಗ್ರೇಟರ್ ಬೆಂಗಳೂರು ಚುನಾವಣೆ ಸಿದ್ಧತೆ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಿದರು. ನಗರದ ಎಲ್ಲಾ ವಿಧಾಸಭೆ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಸೇರಿದಂತೆ ಆಹ್ವಾನಿತ ಪ್ರಮುಖರ ಜತೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು.
ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಚುನಾವಣೆ ನಡೆಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ, ಈ ಸರಕಾರ ಚುನಾವಣೆಯನ್ನು ನಡೆಸುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ, ನಾವು ತಯಾರಿ ಮಾಡಿಕೊಳ್ಳಬೇಕು ಎಂದು ಮುಖಂಡರಿಗೆ ತಿಳಿಸಿದ ಸಚಿವರು; ಮತಗಟ್ಟೆ, ವಾರ್ಡ್ ಮತ್ತು ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಏನೇನು ಮಾಡಬೇಕು, ಯಾವ ರೀತಿಯಲ್ಲಿ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂಬ ಬಗ್ಗೆ ಕೆಲ ಸ್ಪಷ್ಟ ಸೂಚನೆಗಳನ್ನು ನೀಡಿದರು.
ಈ ವೇಳೆ ಶಾಸಕರಾದ ಎಂ.ಟಿ. ಕೃಷ್ಣಪ್ಪ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಜವರಾಯಿ ಗೌಡ, ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಮಾಜಿ ಸದಸ್ಯರಾದ ಕೆ.ಎನ್. ತಿಪ್ಪೇಸ್ವಾಮಿ, ಇ.ಕೃಷ್ಣಪ್ಪ, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಹಿರಿಯ ಮುಖಂಡ ಗೊಟ್ಟಿಗೆರೆ ಮಂಜುನಾಥ ಸೇರಿದಂತೆ ಅನೇಕ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದರು.






