ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ತಿರಸ್ಕರಿಸಿತ್ತು. ಜೊತೆಗೆ ಮರು ತನಿಖೆಗೆ ಕೋರ್ಟ್ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೋರ್ಟ್ ಸೂರಜ್ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟಿದೆ.

ಜೆಡಿಎಸ್ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧದ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣ ಕೈಬಿಡುವಂತೆ ಕೋರಿದ್ದ ಮರುಪರಿಶೀಲನಾ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಲಾಗಿದೆ.

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಡಾ.ಸೂರಜ್ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬವರು ಸಂತ್ರಸ್ತನ ವಿರುದ್ಧ ಪ್ರತಿ ದೂರು ನೀಡಿದ್ದರು.






