ಬೆಂಗಳೂರು: ರಾಜ್ಯದ ನದಿಗಳಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆ(sand mafia) ಪ್ರಕರಣಗಳ ಕುರಿತು ಸ್ವಯಂಪ್ರೇರಿತವಾಗಿ ದಾಖಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (PIL) ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಅವಧಿ ನೀಡಿದೆ.

ಜನವರಿ 28ರಂದು ಮಾಧ್ಯಮ ವರದಿಗಳನ್ನು ಪರಿಗಣಿಸಿ, ಹೈಕೋರ್ಟ್ ಪೀಠವು ಸ್ವಯಂಪ್ರೇರಿತ ದೂರು ದಾಖಲಿಸಲು ಆದೇಶಿಸಿತ್ತು. ಅಲ್ಲದೇ ಈ ಪ್ರಕರಣವನ್ನು ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕೇಂದ್ರ ತನಿಖಾ ಸಂಸ್ಥೆ ಅಥವಾ ವಿಶೇಷ ತನಿಖಾ ತಂಡವನ್ನು ರಚಿಸುವ ಅಗತ್ಯವಿದೆ ಎಂದು ತಿಳಿಸಿತ್ತು.

ಕೃಷ್ಣಾ ನದಿ ತಟ ಪ್ರದೇಶದಲ್ಲಿ ರಾತ್ರಿ ವೇಳೆ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ, ರಾಯಚೂರು ಜಿಲ್ಲೆಯ ಶಾಸಕಿ ಕರೇಮ್ಮ ಜಿ. ನಾಯಕ್ ಅವರು ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಎದುರಿಸಿದ ಬಗ್ಗೆ, ರೈತರಿಗೆ ಆಗುತ್ತಿರುವ ಸಮಸ್ಯೆ ಬಗ್ಗೆ, ಅಕ್ರಮ ಮರಳು ಗಣಿಗಾರಿಕೆಯಲ್ಲಿ ರಾಜಕೀಯ ವ್ಯಕ್ತಿಗಳು ಭಾಗಿಯಾಗಿದ್ದಾರೆ ಎನ್ನುವ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರ ಹೇಳಿಕೆ ಬಗ್ಗೆ ನ್ಯಾಯಾಲಯದಲ್ಲಿ ಚರ್ಚೆ ನಡೆದಿದೆ.

ಈ ಬಗ್ಗೆ ವಾದ-ಪ್ರತಿವಾದವನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ.ಎಂ. ಪೂನಾಚಾ ಅವರ ವಿಭಾಗೀಯ ಪೀಠ ರಾಜ್ಯ ಸರ್ಕಾರಕ್ಕೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಅವಧಿ ನೀಡಿ ಮುಂದಿನ ವಿಚಾರಣೆಯನ್ನು ಏಪ್ರಿಲ್ 7ಕ್ಕೆ ಮುಂದೂಡಿದೆ.






