ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ ಮಟ್ಟದ ಜನಾಂದೋಲನ ಆರಂಭಿಸುವುದಾಗಿ ಎಚ್ಚರಿಸಿದರು.
ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೀಸಲಾತಿ ಜಾರಿಯಲ್ಲಿ ಸರ್ಕಾರ ಗೊಂದಲ ಸೃಷ್ಟಿಸಿ ಅನ್ಯಾಯ ಮಾಡುತ್ತಿದೆ ಎಂದು ದೂರಿದರು. “ಯಾರಾದರೂ ಕೋರ್ಟ್‌ಗೆ ಹೋಗಲಿ, ವಿಚಾರ ನಿಂತುಹೋಗಲಿ ಎಂಬ ಮನೋಭಾವದಲ್ಲಿ ಸರ್ಕಾರ ನಡೆದುಕೊಳ್ಳುತ್ತಿದೆ. ಜನರ ಆಕ್ರೋಶವನ್ನು ಹೋರಾಟವಾಗಿ ರೂಪಾಂತರಿಸುತ್ತೇವೆ,” ಎಂದು ಹೇಳಿದರು.
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ ಪರಿಶಿಷ್ಟ ಜಾತಿಗೆ ಶೇ.15ರಿಂದ 17ಕ್ಕೆ ಹಾಗೂ ಪರಿಶಿಷ್ಟ ವರ್ಗಗಳಿಗೆ ಶೇ.3ರಿಂದ 7ಕ್ಕೆ ಮೀಸಲಾತಿ ಹೆಚ್ಚಿಸಿ ಒಟ್ಟು ಶೇ.25 ಮಾಡಲಾಗಿತ್ತು. ಸರ್ವಪಕ್ಷಗಳ ಒಪ್ಪಿಗೆಯೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿತ್ತು ಎಂದು ಹೇಳಿದರು.
ಒಳಮೀಸಲಾತಿ ಸಂಬಂಧ ನ್ಯಾಯಮೂರ್ತಿ ಡಾ. ಎಚ್ ಎನ್ ನಾಗಮೋಹನ್ ದಾಸ್ ಸಮಿತಿ ವರದಿ ಐದು ಗುಂಪುಗಳ ಶಿಫಾರಸು ಮಾಡಿದ್ದರೂ, ಸರ್ಕಾರ ರಾಜಕೀಯ ಲಾಭಕ್ಕಾಗಿ ಮೂರು ಗುಂಪುಗಳಿಗೆ ಸೀಮಿತಗೊಳಿಸಿ ಗೊಂದಲ ಸೃಷ್ಟಿಸಿದೆ ಎಂದು ಆರೋಪಿಸಿದರು.

ರಾಜ್ಯಪಾಲರನ್ನು ಭೇಟಿ ಮಾಡಿ ಶೇ.17ಕ್ಕೆ ಸಹಿ ಪಡೆದುಕೊಂಡು ಬಂದಿದ್ದರೂ, ನ್ಯಾಯಾಲಯ ತಡೆ ಇದೆ ಎಂಬ ಕಾರಣ ಹೇಳುವುದು ಸರಿಯಲ್ಲ. ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಇದು ಅನ್ಯಾಯವಾಗಿದೆ ಎಂದು ಹೇಳಿದರು. “ಒಳಮೀಸಲಾತಿ ಜಾರಿ ಮಾಡದಿದ್ದರೆ ಸರ್ಕಾರ ಉಳಿಯುವುದಿಲ್ಲ,” ಎಂದು ಎಚ್ಚರಿಸಿದರು.
ಈ ವೇಳೆ ಮಾಜಿ ಸಚಿವ ಬಿ ಶ್ರೀರಾಮುಲು ಮಾತನಾಡಿ, ಬಿಜೆಪಿ ಸರ್ಕಾರ ಮೀಸಲಾತಿ ಜಾರಿಯಲ್ಲಿ ಸಂವಿಧಾನಬದ್ಧವಾಗಿ ನಡೆದುಕೊಂಡಿತ್ತು. ನಾಗಮೋಹನ್ ದಾಸ್ ವರದಿಗೆ ಸರ್ವಪಕ್ಷಗಳ ಅಭಿಪ್ರಾಯ ಪಡೆದು ಸಂಪುಟದಲ್ಲಿ ಚರ್ಚಿಸಿ ಕ್ರಮ ಕೈಗೊಂಡಿದ್ದೆವು ಎಂದು ತಿಳಿಸಿದರು.

ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಜನರನ್ನು ವಂಚಿಸುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ನಾಯಕರು ತಿಳಿಸಿದರು.
ಸಭೆಯಲ್ಲಿ ಮಾಜಿ ಕೇಂದ್ರ ಸಚಿವ ಎ. ನಾರಾಯಣಸ್ವಾಮಿ, ಮಾಜಿ ಸಂಸದ ಮುನಿಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.






