ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಮುಂದಿನ ಎರಡು ದಿನಗಳ ಕಾಲ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಈ ಕುರಿತು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಮಾಹಿತಿ ನೀಡಿದ್ದಾರೆ.

ನಗರದ ಪ್ರಿಡಂ ಪಾರ್ಕ್ ನಲ್ಲಿ ಮಾರ್ಚ್ 24ರಂದು ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ಹಾಗೂ ಮಾರ್ಚ್ 25ರಂದು ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಒಕ್ಕೂಟದಿಂದ ದೊಡ್ಡ ಪ್ರಮಾಣದ ಪ್ರತಿಭಟನೆಗಳು ನಡೆಯಲಿವೆ. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ನಡೆಯುವ ಈ ಪ್ರತಿಭಟನೆಗಳಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆ ಇದೆ.

ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಸಾಧ್ಯತೆಯನ್ನು ಮನಗಂಡು ಮುನ್ನೆಚ್ಚರಿಕಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಇಂದಿನ ಬೆಳಗ್ಗೆ 6 ಗಂಟೆಯಿಂದ ಮಾರ್ಚ್ 25ರ ರಾತ್ರಿ 10 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿರಲಿದೆ.
ನಗರದ ಉಪ್ಪಾರಪೇಟೆ, ಸಿಟಿ ಮಾರ್ಕೆಟ್, ಕಾಟನ್‌ಪೇಟೆ, ಕಲಾಸಿಪಾಳ್ಯ, ಚಾಮರಾಜಪೇಟೆ ಸೇರಿದಂತೆ ಪಶ್ಚಿಮ ವಿಭಾಗದ ಠಾಣೆಗಳು ಹಾಗೂ ಶೇಷಾದ್ರಿಪುರಂ, ಹೈಗ್ರೌಂಡ್ಸ್, ಹಲಸೂರುಗೇಟ್ ಠಾಣಾ ವ್ಯಾಪ್ತಿಗಳಲ್ಲೂ ಮದ್ಯ ಮಾರಾಟ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈ ಅವಧಿಯಲ್ಲಿ ಮದ್ಯದಂಗಡಿಗಳು, ಬಾರ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಪಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ಕಟ್ಟುನಿಟ್ಟಿನ ತಡೆ ವಿಧಿಸಲಾಗಿದೆ.

ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಮೆಜೆಸ್ಟಿಕ್, ಫ್ರೀಡಂ ಪಾರ್ಕ್ ಹಾಗೂ ರೈಲ್ವೆ ನಿಲ್ದಾಣ ಸುತ್ತಮುತ್ತ ಭಾರೀ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.ಪ್ರತಿಭಟನೆಗಳು ಶಾಂತಿಯುತವಾಗಿ ನಡೆಯಲು ಮತ್ತು ಸಾರ್ವಜನಿಕರಿಗೆ ತೊಂದರೆ ಆಗದಂತೆ ಈ ಕ್ರಮ ಕೈಗೊಳ್ಳಲಾಗಿದ್ದು, ನಾಗರಿಕರು ಸಹಕರಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.






