ಧಾರವಾಡ:
ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್ 7ರಂದು ನಗರದ ಸುಭಾಷ್ ರಸ್ತೆ ಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವೇಳೆ, ಮುಸ್ಲಿಂ ಮಹಿಳೆಯರ ಬಗ್ಗೆ ದ್ವೇಷಭಾವನೆ ಮೂಡುವಂತೆ ಹೇಳಿಕೆ ನೀಡಿರುವ ಆರೋಪ ಕೇಳಿಬಂದಿದೆ.

ಈ ಹೇಳಿಕೆಗಳು ಸಮಾಜದಲ್ಲಿ ವೈಷಮ್ಯ ಉಂಟುಮಾಡುವ ಸಾಧ್ಯತೆ ಇದೆ ಎಂದು ಪೊಲೀಸ್ ಇಲಾಖೆ ಅಭಿಪ್ರಾಯಪಟ್ಟಿದೆ.ಪೊಲೀಸ್ ಸಿಬ್ಬಂದಿ ತುಕಾರಾಂ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.ಇದಲ್ಲದೆ, ಅಂಜುಮನ್ ಇಸ್ಲಾಂ ಸಂಸ್ಥೆಯ ವತಿಯಿಂದ ಕೂಡ ಶುಕ್ರವಾರ ಮನವಿ ಸಲ್ಲಿಸಲಾಗಿದೆ.

ಪ್ರಕರಣ ದಾಖಲಿಸುವ ಕುರಿತು ಕಾನೂನು ಸಲಹೆ ಪಡೆಯಲು ಸೂಚಿಸಲಾಗಿದೆ. ಹೀಗಾಗಿ, ಪ್ರಕರಣದ ವಿಚಾರಣೆ ಪ್ರಸ್ತುತ ಪರಿಶೀಲನೆಯಲ್ಲಿದೆ.ಸಮಾಜದಲ್ಲಿ ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ಇಂತಹ ಹೇಳಿಕೆಗಳ ವಿರುದ್ಧ ಕಠಿಣ ಕ್ರಮ ಅಗತ್ಯವೆಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆಯುತ್ತಿದೆ.






