ಮಂಡ್ಯ:
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಏಪ್ರಿಲ್ 15ರಂದು ಆದಿಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಭದ್ರತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಹಲವು ನಿರ್ಬಂಧಗಳನ್ನು ವಿಧಿಸಿ ಆದೇಶ ಹೊರಡಿಸಿದೆ.
ಭದ್ರತಾ ಕ್ರಮಗಳ ಭಾಗವಾಗಿ ನಾಳೆ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ NH 150-A ಹಾಗೂ NH 75-A ಪ್ರಮುಖ ಹೆದ್ದಾರಿಗಳಲ್ಲಿ ವಾಹನ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಇದೇ ವೇಳೆ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಬೆಳ್ಳೂರು ಪಟ್ಟಣ ಪಂಚಾಯಿತಿ ಸುತ್ತಮುತ್ತಲಿನ 8 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆಗೆ ತಾತ್ಕಾಲಿಕ ನಿಷೇಧ ಹೇರಲಾಗಿದೆ. ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.ಭದ್ರತೆಯ ದೃಷ್ಟಿಯಿಂದ ಆದಿಚುಂಚನಗಿರಿ ಹಾಗೂ ಬೆಳ್ಳೂರು ಸುತ್ತಮುತ್ತ 12 ಕಿ.ಮೀ ವ್ಯಾಪ್ತಿಯನ್ನು ‘ನೋ ಫ್ಲೈ ಝೋನ್’ ಎಂದು ಘೋಷಿಸಲಾಗಿದ್ದು, ಡ್ರೋನ್ ಕ್ಯಾಮೆರಾ ಸೇರಿದಂತೆ ಯಾವುದೇ ಮಾನವರಹಿತ ಏರ್ಕ್ರಾಫ್ಟ್ ಹಾರಾಟಕ್ಕೆ ಸಂಪೂರ್ಣ ತಡೆ ವಿಧಿಸಲಾಗಿದೆ.

ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ.ಕ್ಷೇತ್ರದ ಸುತ್ತಮುತ್ತ ಸಾವಿರಾರು ಪೊಲೀಸರನ್ನು ನಿಯೋಜಿಸಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ತಂಗಿ ಭದ್ರತಾ ವ್ಯವಸ್ಥೆಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸಾರ್ವಜನಿಕರು ಹಾಗೂ ಭಕ್ತರು ಆಡಳಿತದ ಸೂಚನೆಗಳಿಗೆ ಸಹಕರಿಸುವಂತೆ ಮನವಿ ಮಾಡಲಾಗಿದೆ.






