ಬೆಂಗಳೂರು:
2025-26ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ.ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿದಂತೆ ಮೂವರು ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಏಕಸದಸ್ಯ ಪೀಠವು ಈ ಆದೇಶ ಹೊರಡಿಸಿ, ಅರ್ಜಿಯನ್ನು ಇತ್ಯರ್ಥಪಡಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಆರಂಭದಲ್ಲಿ ಮಂಡಳಿಯ ಸುತ್ತೋಲೆ ಪ್ರಕಾರ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ 100 ಅಂಕಗಳ ವ್ಯವಸ್ಥೆ (80 ಲಿಖಿತ + 20 ಆಂತರಿಕ) ಇರಬೇಕೆಂದು ಸೂಚಿಸಲಾಗಿತ್ತು. ಆದರೆ ಪರೀಕ್ಷೆ ಸಮೀಪಿಸುತ್ತಿದ್ದಾಗಲೇ ಸರ್ಕಾರ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದೆ ಎಂದು ವಾದಿಸಿದರು.ಇದೇ ವೇಳೆ, ಯುಪಿಎಸ್ಸಿ ಸೇರಿದಂತೆ ಕೇಂದ್ರದ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಗ್ರೇಡ್ ಪರಿಗಣನೆ ಇಲ್ಲದೇ ಕೇವಲ ಅಂಕಗಳನ್ನೇ ಮಾನದಂಡವಾಗಿ ಬಳಸಲಾಗುತ್ತದೆ. ಹೀಗಾಗಿ ತೃತೀಯ ಭಾಷೆಗೆ ಗ್ರೇಡ್ ನೀಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ಹಾನಿಯಾಗಬಹುದು ಎಂಬ ಆತಂಕವನ್ನು ಅರ್ಜಿದಾರರು ವ್ಯಕ್ತಪಡಿಸಿದರು.

ಈ ಕುರಿತು ಸರ್ಕಾರ ಯಾವುದೇ ಅಧಿಕೃತ ನೋಟಿಫಿಕೇಷನ್ ಹೊರಡಿಸಿದ್ದೇ ಎಂಬುದನ್ನು ನ್ಯಾಯಾಲಯ ಪ್ರಶ್ನಿಸಿದಾಗ, ಸರ್ಕಾರಿ ವಕೀಲರು ಮಾಹಿತಿ ಸಂಗ್ರಹಿಸಿ ತಿಳಿಸುವುದಾಗಿ ಹೇಳಿದರು.ಎಲ್ಲಾ ಅಂಶಗಳನ್ನು ಪರಿಗಣಿಸಿದ ನ್ಯಾಯಾಲಯ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷೆ ವಿಷಯಗಳಿಗೆ ಗ್ರೇಡ್ ಬದಲಿಗೆ ಅಂಕಗಳನ್ನು ನೀಡಬೇಕು ಎಂದು ರಾಜ್ಯ ಸರ್ಕಾರ ಮತ್ತು ಪರೀಕ್ಷಾ ಮಂಡಳಿಗೆ ನಿರ್ದೇಶನ ನೀಡಿದೆ.ಇನ್ನೊಂದೆಡೆ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠ ಇತ್ತೀಚೆಗೆ ವಜಾಗೊಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.






