ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವದ ಒಳಜಗಳಗಳು ಮತ್ತು ಆಡಳಿತ ವಿರೋಧಿ ಅಸಮಾಧಾನ ಹೆಚ್ಚುತ್ತಿರುವ ನಡುವೆಯೇ, ಅಹಿಂದ ಸಂಘಟನೆ ಸರ್ಕಾರದ ವಿರುದ್ಧ ತಿರುಗಿಬಿದ್ದಿದೆ. ಈ ಬೆಳವಣಿಗೆ ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.
ಅಹಿಂದ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶಿವಣ್ಣ, ಕಾಂಗ್ರೆಸ್ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, “ಅಹಿಂದ ವರ್ಗವನ್ನು ನಿರ್ಲಕ್ಷಿಸಿದರೆ 2028ರೊಳಗೆ ರಾಷ್ಟ್ರೀಯ ಅಹಿಂದ ಪಕ್ಷವನ್ನು ಸ್ಥಾಪಿಸಿ ಚುನಾವಣೆಗೆ ಇಳಿಯುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಸುದ್ದಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ನಾವು ಕಾಂಗ್ರೆಸ್ಗೆ ಬೆಂಬಲ ನೀಡಿದರೂ, ಅಹಿಂದ ಸಮುದಾಯವನ್ನು ಕಡೆಗಣಿಸಲಾಗಿದೆ. ದಾವಣಗೆರೆಯಲ್ಲಿ ಒಂದೇ ಕುಟುಂಬಕ್ಕೆ ಪ್ರಾಮುಖ್ಯತೆ ನೀಡಿ ಮುಸ್ಲಿಂ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡದೇ ಇರುವುದು ಅಸಮಾಧಾನಕ್ಕೆ ಕಾರಣವಾಗಿದೆ” ಎಂದು ಆರೋಪಿಸಿದರು.
ಇದೇ ವೇಳೆ, ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲೇ, ಶಿವಣ್ಣ ದಲಿತ ಮುಖ್ಯಮಂತ್ರಿ ವಿಚಾರವನ್ನು ಮುಂದಿಟ್ಟು, “ದಲಿತರಿಗೆ ಸಿಎಂ ಸ್ಥಾನ ನೀಡಬೇಕು. ಜಿ ಪರಮೇಶ್ವರಪ್ಪ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಗಳನ್ನಾಗಿ ನೇಮಕ ಮಾಡಬೇಕು” ಎಂದು ಆಗ್ರಹಿಸಿದರು.

ಮುಂದುವರಿದು ಕಾಂಗ್ರೆಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, “ನಾವು ಮತ ಹಾಕಿದ್ದು ನೀವು ಐಶಾರಾಮಿ ಜೀವನ ನಡೆಸಲು ಅಲ್ಲ. ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ, ಆದರೆ ನಾಯಕರು ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ” ಎಂದು ಕಿಡಿಕಾರಿದರು.ಇದಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ ಶಿವಣ್ಣ, “ಅಹಿಂದ ವರ್ಗಕ್ಕೆ ಸಮರ್ಪಕ ಪ್ರಾತಿನಿಧ್ಯ ನೀಡದಿದ್ದರೆ ಕಠಿಣ ನಿರ್ಧಾರ ಕೈಗೊಳ್ಳುತ್ತೇವೆ” ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹೆಚ್ಚುವ ಸೂಚನೆ ನೀಡುತ್ತಿವೆ.






