ರಾಜ್ಯದ ಸರ್ಕಾರಿ ನೌಕರರ ಬಹುಕಾಲದ ಬೇಡಿಕೆಗೆ ಕೊನೆಗೂ ರಾಜ್ಯ ಸರ್ಕಾರ ಸ್ಪಂದಿಸಿದ್ದು, ತುಟ್ಟಿಭತ್ಯೆ (ಡಿಎ) ಹೆಚ್ಚಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಅನುಮೋದನೆ ನೀಡಿದ್ದಾರೆ. ಇದರೊಂದಿಗೆ ಲಕ್ಷಾಂತರ ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರಿಗೆ ಆರ್ಥಿಕವಾಗಿ ನೆರವಾಗುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರ ಶೇ.1.5ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲು ತೀರ್ಮಾನಿಸಿದ್ದು, ಇದು 2026ರ ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಮುಖ್ಯಮಂತ್ರಿಗಳ ಅನುಮೋದನೆ ದೊರೆತಿರುವ ಹಿನ್ನೆಲೆಯಲ್ಲಿ, ಈ ಕುರಿತು ರಾಜ್ಯ ಸರ್ಕಾರವು ಶೀಘ್ರದಲ್ಲೇ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.ಬೆಲೆ ಏರಿಕೆ ಮತ್ತು ದಿನನಿತ್ಯದ ಖರ್ಚು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡಿಎ ಹೆಚ್ಚಳಕ್ಕೆ ಸರ್ಕಾರಿ ನೌಕರರು ಆಗ್ರಹಿಸುತ್ತಿದ್ದರು. ಇದೀಗ ಸರ್ಕಾರದ ನಿರ್ಧಾರದಿಂದ ನೌಕರರಲ್ಲಿ ಸಂತಸ ಮನೆಮಾಡಿದೆ.
ಈ ಕ್ರಮವನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸ್ವಾಗತಿಸಿದ್ದು, ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.“ರಾಜ್ಯ ಸರ್ಕಾರಿ ನೌಕರರ ಹಿತದೃಷ್ಟಿಯಿಂದ ಶೇ.1.5ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಿರುವುದು ಸಂತಸದ ವಿಚಾರ. ಸರ್ಕಾರದ ಈ ನಿರ್ಧಾರ ಲಕ್ಷಾಂತರ ನೌಕರರಿಗೆ ನೆರವಾಗಲಿದೆ” ಎಂದು ಅವರು ತಿಳಿಸಿದ್ದಾರೆ.
ತುಟ್ಟಿಭತ್ಯೆ ಹೆಚ್ಚಳದಿಂದ ವಿವಿಧ ಇಲಾಖೆಗಳ ಸರ್ಕಾರಿ ನೌಕರರು, ಶಿಕ್ಷಕರು ಹಾಗೂ ನಿವೃತ್ತ ನೌಕರರ ವೇತನ ಮತ್ತು ಪಿಂಚಣಿಯಲ್ಲಿ ಹೆಚ್ಚಳವಾಗಲಿದ್ದು, ಸರ್ಕಾರದ ಈ ಕ್ರಮವನ್ನು ನೌಕರ ವಲಯ ಮೆಚ್ಚುಗೆ ವ್ಯಕ್ತಪಡಿಸಿದೆ.






