ಬೆಂಗಳೂರು :
ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.ಬಹಳ ದಿನಗಳ ಬಳಿಕ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಜಿಟಿ ದೇವೇಗೌಡ, ಕೆಲ ಕಾಲ ಮಾತುಕತೆ ನಡೆಸಿದರು. ಜೆಡಿಎಸ್‌ನಿಂದ ದೂರವಾಗಿದ್ದಾರೆ ಹಾಗೂ ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ ಇದೆ ಎಂಬ ಸುದ್ದಿಗಳ ನಡುವೆಯೇ ನಡೆದ ಈ ಭೇಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಟಿ ದೇವೇಗೌಡ, “ದೇವೇಗೌಡರು ದೇಶದ ಪ್ರಖ್ಯಾತ ನಾಯಕರು. ರೈತರ ಪರವಾಗಿ ಕೆಲಸ ಮಾಡಿದವರು. ಅವರ ಬಗ್ಗೆ ಅಪಾರ ಗೌರವ ಇದೆ. ಅವರು ನಮ್ಮನ್ನು ಜೊತೆಯಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ” ಎಂದು ಹೇಳಿದರು.
ಜೆಡಿಎಸ್‌ನಿಂದ ದೂರವಾಗಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾನು ಇನ್ನೂ ಜನತಾದಳದಲ್ಲೇ ಇದ್ದೇನೆ. 2028ರ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿಯೇ ಸ್ಪರ್ಧಿಸುತ್ತೇನೆ” ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಕಾಂಗ್ರೆಸ್ ಸೇರ್ಪಡೆ ಕುರಿತ ಊಹಾಪೋಹಗಳಿಗೆ ತೆರೆ ಎಳೆದರು.
ಜಿಟಿ ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ಮಧ್ಯೆ ಕಳೆದ ಕೆಲವು ತಿಂಗಳಿಂದ ಅಸಮಾಧಾನ ಮುಂದುವರಿದಿತ್ತು. ಪಕ್ಷದ ಕಾರ್ಯಚಟುವಟಿಕೆಗಳಿಂದ ಜಿಟಿಡಿ ದೂರ ಉಳಿದಿದ್ದು, ಇಬ್ಬರ ಮಧ್ಯೆ ಮುಸುಕಿನ ಗುದ್ದಾಟ ನಡೆಯುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು.ಜಿಟಿಡಿ ವಿರುದ್ಧ ಕುಮಾರಸ್ವಾಮಿ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. “ಅವರು ನಮ್ಮ ಜೊತೆ ಇಲ್ಲ. ಪಕ್ಷದ ಬಗ್ಗೆ ನಿಷ್ಠೆ ಇಲ್ಲದವರನ್ನು ನಮ್ಮ ಜೊತೆ ಇಟ್ಟುಕೊಳ್ಳಬೇಕಾ?” ಎಂದು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಯಾಗಿ ಜಿಟಿ ದೇವೇಗೌಡ ಕೂಡ ಪರೋಕ್ಷವಾಗಿ ಅಸಮಾಧಾನ ಹೊರಹಾಕುತ್ತಿದ್ದರು.
ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಸ್ಥಾನದಿಂದ ಜಿಟಿಡಿಯನ್ನು ಬದಲಿಸಿ ಮಾಜಿ ಶಾಸಕ ಎಂ. ಕೃಷ್ಣಾರೆಡ್ಡಿಗೆ ಜವಾಬ್ದಾರಿ ನೀಡಿದ್ದೇ ಅಸಮಾಧಾನಕ್ಕೆ ಪ್ರಮುಖ ಕಾರಣ ಎಂದು ಹೇಳಲಾಗುತ್ತಿದೆ. ಈ ಬೆಳವಣಿಗೆಯ ಬಳಿಕ ಜಿಟಿಡಿ ಪಕ್ಷದ ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ಈ ಹಿಂದೆ ಕೂಡ ಜಿಟಿಡಿ ಮುನಿಸು ತಣಿಸಲು ಸ್ವತಃ ದೇವೇಗೌಡರು ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು. ಇದೀಗ ಮತ್ತೊಮ್ಮೆ ದೇವೇಗೌಡರ ಭೇಟಿಯಾದ ಜಿಟಿ ದೇವೇಗೌಡ, ಜೆಡಿಎಸ್‌ನಲ್ಲೇ ಮುಂದುವರಿಯುವುದಾಗಿ ಘೋಷಿಸಿರುವುದು ಪಕ್ಷದ ಒಳರಾಜಕೀಯಕ್ಕೆ ಹೊಸ ತಿರುವು ನೀಡಿದಂತಾಗಿದೆ.





