ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ ಒಟ್ಟು 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ವಿವಿಧ ಹಂತಗಳಲ್ಲಿ ನಡೆಯುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಡಿಟೆಕ್ಟಿವ್ ಸಬ್-ಇನ್‌ಸ್ಪೆಕ್ಟರ್, ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್, ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಯನ್ನು ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಡಿಟೆಕ್ಟಿವ್ ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳು
ಒಟ್ಟು 20 ಡಿಟೆಕ್ಟಿವ್ ಸಬ್-ಇನ್‌ಸ್ಪೆಕ್ಟರ್ ಹುದ್ದೆಗಳ ಪೈಕಿ 5 ಹುದ್ದೆಗಳು ಕಲ್ಯಾಣ ಕರ್ನಾಟಕ ಹಾಗೂ 15 ಹುದ್ದೆಗಳು ರಾಜ್ಯದ ಉಳಿದ ಭಾಗಕ್ಕೆ ಮೀಸಲಿರಿಸಲಾಗಿದೆ. ಈ ಹುದ್ದೆಗಳ ಅಧಿಸೂಚನೆ ಸಿದ್ಧವಾಗಿದ್ದು, ಶೀಘ್ರದಲ್ಲೇ ಕೆಇಎ ಅಧಿಕೃತವಾಗಿ ಪ್ರಕಟಿಸಲಿದೆ.
ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ – 1,600 ಹುದ್ದೆಗಳು
ಒಟ್ಟು 1,600 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಪೈಕಿ 179 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಹಾಗೂ 1,421 ಹುದ್ದೆಗಳು ಉಳಿದ ಭಾಗಕ್ಕೆ ಮೀಸಲಾಗಿದೆ. ಅಧಿಸೂಚನೆ ಈಗಾಗಲೇ ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಗೊಂಡಿದ್ದು, ಜೂನ್ 22ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಜುಲೈ 24 ಕೊನೆಯ ದಿನವಾಗಿದ್ದು, 2027ರ ಫೆಬ್ರವರಿ 6ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ – 3,991 ಹುದ್ದೆಗಳು ಒಟ್ಟು 3,991 ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಪೈಕಿ 596 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಹಾಗೂ 3,395 ಹುದ್ದೆಗಳು ಉಳಿದ ಭಾಗಕ್ಕೆ ಮೀಸಲಾಗಿವೆ.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಜುಲೈ 3 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಗಸ್ಟ್ 2ರಂದು ಲಿಖಿತ ಪರೀಕ್ಷೆ ನಡೆಯಲಿದೆ.
ವಿಶೇಷ ಮೀಸಲು ಪೊಲೀಸ್ ಹುದ್ದೆಗಳು
1,789 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಪೈಕಿ 334 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಹಾಗೂ 1,455 ಹುದ್ದೆಗಳು ಉಳಿದ ಭಾಗಕ್ಕೆ ಮೀಸಲಾಗಿದೆ. ಈ ಹುದ್ದೆಗಳ ಅಧಿಸೂಚನೆ ಸಿದ್ಧವಾಗಿದ್ದು, ಶೀಘ್ರದಲ್ಲೇ ಪ್ರಕಟವಾಗಲಿದೆ.
ಇದರ ಜೊತೆಗೆ 161 ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ (ಸಿವಿಲ್) ಹಾಗೂ 364 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಸಹ ಕಲ್ಯಾಣ ಕರ್ನಾಟಕ ಭಾಗಕ್ಕೆ ಮೀಸಲಿರಿಸಲಾಗಿದ್ದು, ಈ ಹುದ್ದೆಗಳ ಅಧಿಸೂಚನೆಯೂ ಶೀಘ್ರದಲ್ಲೇ ಹೊರಬೀಳಲಿದೆ.

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಆದ್ಯತೆ
ಒಟ್ಟಾರೆ 7,925 ಪೊಲೀಸ್ ಹುದ್ದೆಗಳ ಪೈಕಿ 1,639 ಹುದ್ದೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಹಾಗೂ 6,286 ಹುದ್ದೆಗಳು ರಾಜ್ಯದ ಉಳಿದ ಭಾಗದ ಅಭ್ಯರ್ಥಿಗಳಿಗೆ ಮೀಸಲಿರಿಸಲಾಗಿದೆ.
ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಸರ್ಕಾರ ವಿಶೇಷ ಆದ್ಯತೆ ನೀಡಿದ್ದು, ಎಲ್ಲಾ ನೇಮಕಾತಿಗಳನ್ನು ಪಾರದರ್ಶಕವಾಗಿ ನಡೆಸಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.






