ಬೆಂಗಳೂರು: ಫುಟ್ಬಾಲ್ ವಿಶ್ವಕಪ್ ಪಂದ್ಯಗಳನ್ನು ವೀಕ್ಷಿಸುವ ಅಭಿಮಾನಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ವಿಶ್ವಕಪ್‌ನ ಪ್ರಮುಖ ಪಂದ್ಯಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಹೊಟೇಲ್‌ಗಳು, ರೆಸ್ಟೋರೆಂಟ್‌ಗಳು ಹಾಗೂ ಆಹಾರ ಮಳಿಗೆಗಳು ನಿಗದಿತ ದಿನಗಳಲ್ಲಿ ಮಧ್ಯರಾತ್ರಿ 3.30 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

ಭಾರತ ರಾಷ್ಟ್ರೀಯ ರೆಸ್ಟೋರೆಂಟ್ ಸಂಸ್ಥೆ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ಅದರಂತೆ ಜುಲೈ 14, 15 ಹಾಗೂ 19ರಂದು ಮಾತ್ರ ಈ ವಿಶೇಷ ಅನುಮತಿ ಅನ್ವಯವಾಗಲಿದೆ.

ಸಾಮಾನ್ಯವಾಗಿ ನಿಗದಿತ ಸಮಯದ ಬಳಿಕ ಆಹಾರ ಮಳಿಗೆಗಳನ್ನು ಮುಚ್ಚಬೇಕಾಗುತ್ತದೆ. ಆದರೆ ವಿಶ್ವಕಪ್ ಪಂದ್ಯಗಳನ್ನು ದೊಡ್ಡ ಪರದೆಗಳಲ್ಲಿ ವೀಕ್ಷಿಸಲು ಸಾವಿರಾರು ಅಭಿಮಾನಿಗಳು ಸೇರುವ ಸಾಧ್ಯತೆ ಇರುವುದರಿಂದ, ಸಾರ್ವಜನಿಕರ ಅನುಕೂಲಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕರ್ನಾಟಕ ಪೊಲೀಸ್ ಕಾಯ್ದೆಯಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ತಡರಾತ್ರಿ ಪಂದ್ಯ ಪ್ರದರ್ಶನಕ್ಕೆ ಅನುಮತಿ ನೀಡುವ ಆದೇಶ ಹೊರಡಿಸಿದ್ದಾರೆ.

ಆದರೆ ಈ ಅವಧಿಯಲ್ಲಿ ಕಾರ್ಯನಿರ್ವಹಿಸುವ ಹೊಟೇಲ್‌ಗಳು ಮತ್ತು ರೆಸ್ಟೋರೆಂಟ್‌ಗಳು ಪೊಲೀಸ್ ಇಲಾಖೆ ಹಾಗೂ ಸ್ಥಳೀಯ ಆಡಳಿತದ ಎಲ್ಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾರ್ವಜನಿಕ ಶಾಂತಿ, ಸುರಕ್ಷತೆ ಹಾಗೂ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.






