ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಉಪಕುಲಪತಿ ಪ್ರೊ. ಶಿವರಾಜು ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.

ಇತ್ತೀಚೆಗೆ ಉಪಕುಲಪತಿಯಾಗಿ ನೇಮಕಗೊಂಡಿರುವ ಪ್ರೊ. ಶಿವರಾಜು ಅವರ ವಿರುದ್ಧ ಭ್ರಷ್ಟಾಚಾರದ ಆರೋಪಗಳಿವೆ ಎಂದು ಆರೋಪಿಸಿದ ಎಬಿವಿಪಿ, ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಹುದ್ದೆಯಿಂದ ದೂರವಿಡಬೇಕು ಎಂದು ಒತ್ತಾಯಿಸಿತು. ಪ್ರತಿಭಟನೆಯ ವೇಳೆ ಕಾರ್ಯಕರ್ತರು ವಿಸಿ ಕಚೇರಿಗೆ ಬೀಗ ಹಾಕಲು ಯತ್ನಿಸಿ, ವಿಸಿ ಕೂಡಲೇ ಸ್ಥಳಕ್ಕೆ ಬಂದು ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು, ಆಡಳಿತ ಕಟ್ಟಡದೊಳಗೆ ಪ್ರತಿಭಟನೆ ನಡೆಸಲು ಅವಕಾಶ ಇಲ್ಲ ಎಂದು ತಿಳಿಸಿದರು. ಇದರಿಂದ ಎಬಿವಿಪಿ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.

ಇದೇ ವೇಳೆ ಸ್ನಾತಕೋತ್ತರ ವಿದ್ಯಾರ್ಥಿಗಳ ಸಂಘಟನೆ ಹಾಗೂ ಎಬಿವಿಪಿ ಕಾರ್ಯಕರ್ತರ ನಡುವೆಯೂ ಮಾತಿನ ಚಕಮಕಿ ನಡೆದಿದ್ದು, ವಿಶ್ವವಿದ್ಯಾಲಯದ ಆವರಣದಲ್ಲಿ ಇತರ ಸಂಘಟನೆಗಳು ಪ್ರತಿಭಟನೆ ನಡೆಸಬಾರದು ಎಂದು ಕೆಲ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಜ್ಞಾನಭಾರತಿ ಕ್ಯಾಂಪಸ್ನಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ.







