ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲ್ಲೂಕಿನ ದೊಡ್ಡ ಕುರುಬರಹಳ್ಳಿ ಗ್ರಾಮದಲ್ಲಿ ದೇವಸ್ಥಾನ ಪ್ರವೇಶ ವಿಚಾರವಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ತಡೆ ಒಡ್ಡಲಾಗಿದೆ ಎಂಬ ಆರೋಪ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಗ್ರಾಮದ ನೂತನ ಬಿಸಿಲು ಮಾರಮ್ಮ ದೇವಸ್ಥಾನದ ಉದ್ಘಾಟನೆ ಹಾಗೂ ಕುಂಭಾಭಿಷೇಕ ಕಾರ್ಯಕ್ರಮಕ್ಕೆ ಭೇಟಿ ನೀಡಿದ್ದ ನಿಖಿಲ್ ಅವರಿಗೆ ದರ್ಶನ ಪಡೆಯಲು ಅವಕಾಶ ನೀಡದೆ ದೇವಸ್ಥಾನದ ಬಾಗಿಲಿಗೆ ಬೀಗ ಹಾಕಲಾಗಿತ್ತು ಎಂದು ಜೆಡಿಎಸ್ ನಾಯಕರು ಆರೋಪಿಸಿದ್ದಾರೆ. ಈ ಘಟನೆಯಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರ ನಡುವೆ ವಾಗ್ವಾದವೂ ನಡೆದಿದೆ.
ಮಾಧ್ಯಮಗಳೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಗ್ರಾಮದ ಜನರು ಪ್ರೀತಿಯಿಂದ ದೇವಸ್ಥಾನದ ಉದ್ಘಾಟನೆಗೆ ಆಹ್ವಾನ ನೀಡಿದ್ದರು. ಅದರಂತೆ ಕಾರ್ಯಕ್ರಮಕ್ಕೆ ತೆರಳಿದ್ದೆ. ಆದರೆ, ತಾವು ಆಗಮಿಸುವ ಸಂದರ್ಭದಲ್ಲಿ ಕಾಂಗ್ರೆಸ್‌ನ ಕೆಲ ನಾಯಕರು ದೇವಸ್ಥಾನದ ಅಂಗಳದಲ್ಲೇ ನಿಂತು ಬಾಗಿಲು ಹಾಕಿ ಕೀ ಇಟ್ಟುಕೊಂಡು, ‘ನಿಖಿಲ್ ಬರಬಾರದು, ಕೈಮುಗಿಯಬಾರದು’ ಎಂಬ ರೀತಿಯಲ್ಲಿ ಅಡ್ಡಿಪಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.ಈ ಘಟನೆಯಿಂದ ಗ್ರಾಮಸ್ಥರು, ವಿಶೇಷವಾಗಿ ಮಹಿಳೆಯರು ಬೇಸರಗೊಂಡಿದ್ದಾರೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ ಎಂದು ನಿಖಿಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವಸ್ಥಾನ ಯಾರೊಬ್ಬರ ವೈಯಕ್ತಿಕ ಸ್ವತ್ತಲ್ಲ. ಭಕ್ತಾದಿಗಳು ಹಣ ಸಂಗ್ರಹಿಸಿ ನಿರ್ಮಿಸಿರುವ ದೇವಾಲಯದಲ್ಲಿ ಎಲ್ಲರಿಗೂ ಸಮಾನವಾಗಿ ದೇವರ ದರ್ಶನ ಪಡೆಯುವ ಅವಕಾಶ ಇರಬೇಕು ಎಂದು ಹೇಳಿದ್ದಾರೆ.

ಸ್ಥಳೀಯ ಶಾಸಕರು ಘಟನೆಯನ್ನು ಖಂಡಿಸುವುದಾಗಿ ಹೇಳಿದ್ದರೂ, ಘಟನೆ ನಡೆಯುವ ಸಂದರ್ಭದಲ್ಲಿ ಮೌನವಾಗಿದ್ದೇಕೆ ಎಂದು ನಿಖಿಲ್ ಪ್ರಶ್ನಿಸಿದ್ದಾರೆ. ಅಲ್ಲದೆ, ಪರಿಸ್ಥಿತಿ ಉದ್ವಿಗ್ನಗೊಂಡಿದ್ದರೂ ಪೊಲೀಸರು ಸ್ಥಳಕ್ಕೆ ಬರಲು ಸುಮಾರು ಒಂದು ಗಂಟೆ ತಡವಾಗಿದ್ದೇಕೆ ಎಂಬ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಘಟನೆ ಬಳಿಕ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪರಿಸ್ಥಿತಿ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು. ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಇನ್ನು ಈ ಘಟನೆಗೆ ಸಂಬಂಧಿಸಿದಂತೆ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿ, ದೇವಸ್ಥಾನಕ್ಕೆ ಬೀಗ ಹಾಕಿ ನಿಖಿಲ್ ಅವರಿಗೆ ಪ್ರವೇಶ ನಿರಾಕರಿಸಿರುವುದು ಸರಿಯಲ್ಲ. ನಮ್ಮ ಪಕ್ಷದ ಮುಖಂಡರು ಅಥವಾ ಕಾರ್ಯಕರ್ತರು ಇಂತಹ ವರ್ತನೆ ತೋರಬಾರದು. ದೇವಸ್ಥಾನ ಎಲ್ಲರಿಗೂ ಸೇರಿದ್ದು, ಇಂತಹ ಘಟನೆಗಳನ್ನು ತಾವು ಬೆಂಬಲಿಸುವುದಿಲ್ಲ ಎಂದು ಖಂಡಿಸಿದ್ದಾರೆ. ಸಚಿವ ಬಾಲಕೃಷ್ಣ ಕೂಡ ಘಟನೆಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪ್ರತಿಕ್ರಿಯಿಸಿರುವುದಾಗಿ ವರದಿಯಾಗಿದೆ.
ದೇವಸ್ಥಾನದ ಉದ್ಘಾಟನೆಯ ಸಂದರ್ಭದಲ್ಲಿ ನಡೆದ ಈ ಬೆಳವಣಿಗೆ ಇದೀಗ ರಾಜಕೀಯ ಸಂಘರ್ಷಕ್ಕೆ ತಿರುಗಿದೆ. ದೇವಸ್ಥಾನದ ವಿಚಾರದಲ್ಲಿ ರಾಜಕೀಯ ಬೆರೆಸಬಾರದು ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದ್ದು, ಘಟನೆಯ ಸಂಪೂರ್ಣ ಸತ್ಯಾಸತ್ಯತೆ ಕುರಿತು ಚರ್ಚೆ ಮುಂದುವರಿದಿದೆ.






