ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರ ಸಲ್ಲಿಕೆ ವೇಳೆ ಪೊಲೀಸರು ಬಲವಂತವಾಗಿ ನಮ್ಮನ್ನು ತಡೆಹಿಡಿದಿದ್ದಾರೆ ಮಾತ್ರವಲ್ಲ ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮೇಲೆ ಪೊಲೀಸರು ದೂರು ದಾಖಲಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತ ಪಡಿಸಿದ ಸಿದ್ದರಾಮಯ್ಯ. “ರಾಜರಾಜೇಶ್ವರಿ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತ್ತು ನನ್ನ ಬೆಂಗಾವಲು ಸಿಬ್ಬಂದಿ ವಿರುದ್ಧ ದೂರು ದಾಖಲಿಸಿದ್ದಾರೆ. ಇದು ರಾಜ್ಯ ಬಿಜೆಪಿ ಸರ್ಕಾರದ ಸರ್ವಾಧಿಕಾರ, ದುರಹಂಕಾರ ಮತ್ತು ಹತಾಶೆಯ ನಡವಳಿಕೆ” ಎಂದಿದ್ದಾರೆ.
ಚುನಾವಣೆಗಳು ಚುನಾವಣಾ ಆಯೋಗದ ಕಣ್ಗಾವಲಿನಲ್ಲಿ ನಡೆಯಬೇಕು ಮತ್ತು ಪೊಲೀಸರು ನಿಷ್ಪಕ್ಷಪಾತದಿಂದ ಕಾರ್ಯನಿರ್ವಹಿಸಬೇಕು. ಈ ಪ್ರಕರಣದಲ್ಲಿ ಚುನಾವಣಾ ಆಯೋಗವನ್ನು ಪಕ್ಕಕ್ಕೆ ಸರಿಸಿ ಪೊಲೀಸರೇ ಅತ್ಯುತ್ಸಾಹದಿಂದ ದೂರು ದಾಖಲಿಸಿರುವುದರಲ್ಲಿ ರಾಜ್ಯ ಸರ್ಕಾರದ ಕೈವಾಡ ಎದ್ದು ಕಾಣುತ್ತಿದೆ.
ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದ ಸಂದರ್ಭದಲ್ಲಿ ಬಿಜೆಪಿ ನಾಯಕರು ಚುನಾವಣಾ ನೀತಿಸಂಹಿತೆ ಮತ್ತು ಕೋವಿಡ್ ನಿರ್ಬಂಧಗಳನ್ನು ಉಲ್ಲಂಘಿಸಿದ್ದರೂ ಕಣ್ಣುಮುಚ್ಚಿಕೊಂಡಿದ್ದ ಪೊಲೀಸರ ನಡವಳಿಕೆ ಖಂಡನೀಯ. ಈ ಎಲ್ಲ ಅಂಶಗಳನ್ನು ಉಲ್ಲೇಖಿಸಿ ಚುನಾವಣಾ ಆಯೋಗಕ್ಕೆ ನಮ್ಮ ಪಕ್ಷ ದೂರು ನೀಡಲಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಾಗದ ಬಿಜೆಪಿ, ಮುಂದಿನ ದಿನಗಳಲ್ಲಿ ಈ ರೀತಿ ಅಧಿಕಾರ ದುರುಪಯೋಗದ ಮೂಲಕ ನಮ್ಮನ್ನು ನಿಯಂತ್ರಿಸುವ ಪ್ರಯತ್ನ ಮಾಡಲಿರುವುದು ಸ್ಪಷ್ಟ. ಇದಕ್ಕೆ ಉಪಚುನಾವಣೆ ನಡೆಯಲಿರುವ ಎರಡು ಕ್ಷೇತ್ರಗಳ ಮತದಾರರು ಸೂಕ್ತ ಉತ್ತರ ನೀಡಲಿದ್ದಾರೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.