ಕರ್ನಾಟಕದಲ್ಲಿ ಕೋವಿಡ್ ಲಾಕ್ಡೌನ್ ಹಿನ್ನಲೆ, ಬೆಳಗ್ಗೆ 6 ರಿಂದ ಬೆಳಗ್ಗೆ 10 ರವರೆಗೆ ದಿನಬಳಕೆ ವಸ್ತುಗಳನ್ನು ಕೊಳ್ಳಲು ಅವಕಾಶ ಮಾಡಿಕೊಡಲಾಗಿತ್ತು. ಇದೀಗ ದಿನಸಿ ಮತ್ತು ಎಪಿಎಂಸಿ ಮಾರುಕಟ್ಟೆಯನ್ನು ಬೆಳಿಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ತೆರೆಯಲು ರಾಜ್ಯ ಸರ್ಕಾರ ಅವಧಿಯನ್ನು ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ.
ವಸ್ತುಗಳ ಖರೀದಿಯ ವೇಳೆ ಜನಸಂದಣಿ, ನೂಕು ನುಗ್ಗಲಾಟ ತಪ್ಪಿಸುವ ಸಲುವಾಗಿ ಈ ರೀತಿಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ಜೊತೆಗೆ ತಳ್ಳುಗಾಡಿಯ ಮೂಲಕ ತರಕಾರಿ, ಹಣ್ಣು ಮಾರಾಟ ಮಾಡುವವರಿಗೆ, ಹಾಲಿನ ಅಂಗಡಿ, ಹಾಪ್ಕಾಮ್ಸ್ ಹಾಗು ಹೆಚ್ಚು ಬೆಲೆಗೆ ಮಾರದೆ ಮಾರುಕಟ್ಟೆಯ ಬೆಲೆಗೆ ವ್ಯಾಪಾರ ಮಾಡುವವರಿಗೆ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಆದರೆ ಎಲ್ಲಾ ರೀತಿಯ ಸಂತೆಗಳನ್ನು ನಿರ್ಬಂಧಿಸಲಾಗಿದೆ.
ಮೇ 2 ರಂದು ಅನ್ವಯವಾಗುವಂತೆ ಈ ಪರಿಷ್ಕೃತ ಆದೇಶವು ಜಾರಿಯಲ್ಲಿರುತ್ತದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.
ಈ ಆದೇಶವನ್ನು ಮುಖ್ಯ ಆಯುಕ್ತರು, ಬಿಬಿಎಂಪಿ, ಪೊಲೀಸ್ ಆಯುಕ್ತರು, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಟಾಧಿಕಾರಿಗಳು, ಹಾಗೂ ಸಂಬಂಧಿಸಿದ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸತಕ್ಕದ್ದು ಎಂದು ರಾಜ್ಯ ಸರ್ಕಾರ ಆದೇಶದ ಪ್ರತಿಯಲ್ಲಿ ತಿಳಿಸಿದೆ.