ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಪೂಜಾ ಕಾರ್ಯಕ್ಕೆ ಬಳಸಲು ಆನೆಯನ್ನು ಇರಿಸಿಕೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್, ಆನೆಗಳು ಕಾಡಿನಲ್ಲಿ ಇರಬೇಕು ಹೊರತು ದೇವಸ್ಥಾನದಲ್ಲಿ ಅಲ್ಲ ಎಂದು ಮಹತ್ವದ ತೀರ್ಪು ನೀಡಿದೆ.
ಬೆಂಗಳೂರು ನಗರದ ತಿಂಡ್ಲುವಿನ ವಿದ್ಯಾರಣ್ಯಪುರದ ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ಕೆ ಬಳಸಲು ಆನೆಯನ್ನು ಇರಿಸಿಕೊಂಡಿರುವುದಕ್ಕೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.
ಈ ಸಂಬಂಧಿಸಿದಂತೆ ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗ ನಡೆಸಿದ್ದು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನ ಖಾಸಗಿ ದೇವಾಲಯವಾಗಿತ್ತು. ಅಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲು ಆನೆಯೊಂದನ್ನು ತಂದು ಪೋಷಿಸಲಾಗುತ್ತಿತ್ತು. ಇದೀಗ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದ ಕಾರಣ ಆನೆಯೂ ಸರ್ಕಾರದ ವಶದಲ್ಲಿದೆ. ಅದನ್ನು ಸ್ಥಳಾಂತರಿಸದೇ ದೇವಸ್ಥಾನದಲ್ಲಿಯೇ ಇರಿಸಲು ಮುಜರಾಯಿ ಇಲಾಖೆಗೆ ನಿರ್ದೇಶಿಸಬೇಕು ಎಂದುಕೋರಿದರು.
ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಆನೆಗಳು ಕಾಡಿನಲ್ಲಿರಬೇಕೇ ಹೊರತು ದೇಗುಲಗಳಲ್ಲಲ್ಲ ಎಂದಿದೆ. ಎಂದು ಅರ್ಜಿದಾರರಿಗೆ ಕೋರ್ಟ್ ಚಾಟಿ ಬೀಸಿದೆ.
ಆನೆಯನ್ನು ದೇವಸ್ಥಾನದಲ್ಲಿರಿಸಿ ಪೂಜಾ ಕಾರ್ಯಕ್ರಮಕ್ಕೆ ಬಳಸುವುದು ಎಷ್ಟು ಸರಿ ಎಂದು ಪೀಠ ಅರ್ಜಿದಾರರನ್ನು ನೇರವಾಗಿ ಪ್ರಶ್ನಿಸಿದೆ. ಅದಕ್ಕೆ ವಕೀಲರು ಈ ಪದ್ಧತಿ ಹಿಂದಿನಿಂದಲೂ ಜಾರಿಯಲ್ಲಿದೆ ಎಂದುದ್ದಾದರು. ಇದನ್ನು ಆಕ್ಷೇಪಿಸಿದ ಪೀಠ, ಹಿಂದಿನ ಕಾಲದಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಜಾರಿಯಲ್ಲಿರಲಿಲ್ಲ. ಇದೀಗ ಆ ಕಾಯ್ದೆ ಜಾರಿಯಲ್ಲಿದೆ. ಪದ್ಧತಿ ಇತ್ತು ಎಂದು ಮುಂದುವರಿಸುತ್ತೀರಿ ಎನ್ನುವುದಾದರೆ ಒಪ್ಪಲಾಗದು ಎಂದು ಖಾರವಾಗಿ ಉತ್ತರಿಸಿದೆ.
ಸರ್ಕಾರಿ ವಕೀಲ ವಿಜಯ್ ಕುಮರ್ ಪಾಟೀಲ್, ಆನೆಗೆ ಆರೋಗ್ಯ ಸಮಸ್ಯೆಯಿದೆ. ಚಿಕಿತ್ಸೆ ನೀಡುವ ಅಗತ್ಯ ಇರುವುದರಿಂದ ಅದನ್ನು ಮಾಲೂರಿನ ಅರಣ್ಯ ಇಲಾಖೆಯ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಅದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ 2 ವಾರ ಕಾಲಾವಕಾಶ ನೀಡಿತು. ಜತೆಗೆ, ಆನೆಗೆ ಸೂಕ್ತ ಚಿಕಿತ್ಸೆ ಕಲ್ಪಿಸಿ, ವೈದ್ಯಕೀಯ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಸೆ.13ಕ್ಕೆ ವಿಚಾರಣೆ ಮುಂದೂಡಲಾಗಿದೆ.






