ಕೋವಿಡ್ 19 ಮೂರನೇ ಅಲೆಯ ಅಪಾಯದ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಭಾಗಗಳಿಂದ ಬರುವವರ ಮೇಲೆ ತೀವ್ರ ನಿಗಾ ಇಡಲು ಚಕ್ ಪೋಸ್ಟ್‌ಗಳಿಗೆ ನಿರಂತರ ಭೇಟಿ ನೀಡಿ ಪರಿಶೀಲಿಸುವಂತೆ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಆಲಮಟ್ಟಿ ಕೃಷ್ಣ ಭಾಗ್ಯ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿ ಸಭಾಂಗಣದಲ್ಲಿಂದು ವಿಜಯಪುರ ಬಾಗಲಕೋಟೆ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಕೋವಿಡ್ 19 ಮೂರನೇ ಅಲೆಯ ಬಗ್ಗೆ ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಬೇಕು. ಚೆಕ್ ಪೋಸ್ಟ್ ಗಳಲ್ಲಿ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳಿಂದ ಆಗಮಿಸುವ ನಾಗರೀಕರ ಬಗ್ಗೆ ತೀವ್ರ ನಿಗಾ ಇಟ್ಟು ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ನಿರಂತರವಾಗಿ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ನಿಗಾ ವಹಿಸುವಂತೆ ಸೂಚನೆ ನೀಡಿದ್ದಾರೆ.
ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಿಗೆ ಕೋವಿಡ್ 19 ಲಸಿಕೆಗಳ ಸರಬರಾಜು ಹೆಚ್ಚಿಸಲು ಪ್ರಯತ್ನಿಸಲಾಗುವುದು. ವಿಶೇಷವಾಗಿ ಈ ಎರಡೂ ಜಿಲ್ಲೆಗಳಿಗೆ ಮುಂದಿನ ದಿನಗಳಲ್ಲಿ ಪ್ರತಿ ದಿನಕ್ಕೆ ತಲಾ 25000 ಸಾವಿರ ಲಸಿಕೆಗಳ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದ್ದಾರೆ.
ಕೋವಿಡ್ 19 ಮೂರನೇ ಅಲೆಯ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಿಗೆ ವಿಶೇಷ ಗಮನ ನೀಡಬೇಕು. ಮಕ್ಕಳಿಗಾಗಿ ಜಿಲ್ಲಾ ಆಸ್ಪತ್ರೆ ಗಳಲ್ಲಿ ಹೆಚ್ಚಿನ ಐಸಿಯು ಬೆಡ್ ಗಳನ್ನು ಮೀಸಲಿಡಬೇಕು. ಮಕ್ಕಳ ಬೆಳವಣಿಗೆ ಸೇರಿದಂತೆ ಅಪೌಷ್ಟಿಕತೆ ನಿವಾರಣೆಗೆ ಗಮನ ಇಟ್ಟು ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಗರಗಳ ವಾರ್ಡ್ ವ್ಯಾಪ್ತಿಯಲ್ಲಿ ಮಕ್ಕಳ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಬೇಕು. ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕಂದಾಯ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಸಹಯೋಗದೊಂದಿಗೆ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಕ್ರಮ ಕೈಗೊಳ್ಳಬೇಕು. ವಿಶೇಷವಾಗಿ ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಹಾಗೂ ಅಪೌಷ್ಟಿಕತೆ ಕೊರತೆ ನೀಗಿಸಲು ವಿಷೇಶವಾಗಿ ಗಮನ ನೀಡಲು ಸೂಚಿಸಿದ್ದಾರೆ.
ಬ್ಲಾಕ್ ಫಂಗಸ್ ಪ್ರಕರಣಗಳಿಗೆ ಸಂಬಂಧಿಸಿದಂತೆ ರೋಗಿಗಳ ಚಿಕಿತ್ಸೆ ವೆಚ್ಚ ಹೆಚ್ಚಿನ ರೀತಿಯಲ್ಲಿ ಆಗುತ್ತಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಬ್ಲ್ಯಾಕ್ ಫಂಗಸ್ ಚಿಕಿತ್ಸೆ ಪಡೆಯುವ ರೋಗಿಗಳ ಚಿಕಿತ್ಸೆ ಔಷಧಿ ವೆಚ್ಚ ಸರ್ಕಾರದಿಂದ ಭರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಕೋವಿಡ್ 19 ಮೊದಲ ಹಾಗೂ 2ನೇ ಅಲೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸವಾಲನ್ನು ಎದುರಿಸಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ್ದಾರೆ. ಇದಕ್ಕಾಗಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು 3ನೇ ಅಲೆ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳೊಂದಿಗೆ ಸಜ್ಜುಗೊಳ್ಳುವಂತೆ ಅವರು ಸೂಚನೆ ನೀಡಿದರು.
ಮಧ್ಯಮ ಹಾಗೂ ಬೃಹತ್ ಉದ್ಯಮಿದಾರರು ತಮ್ಮ ಸಿಬ್ಬಂದಿಗಳಿಗೆ ಅವರೇ ಪ್ರಥಮ ಹಾಗೂ 2ನೇ ಲಸಿಕೆ ದೊರಕಿಸಬೇಕು. ವಿಜಯಪುರದ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಉನ್ನತೀಕರಣಕ್ಕಾಗಿ 22 ಕೋಟಿ ರೂ. ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಸಂದರ್ಭ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ, ಸಂಸದ ರಮೇಶ ಜಿಗಜಿಣಗಿ, ಎ.ಎಸ್. ಶಿವಾನಂದ ಪಾಟೀಲ್ ನಡಹಳ್ಳಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಚಿವರಾದ ಮುರುಗೇಶ ನಿರಾಣಿ, ಉಮೇಶ ಕತ್ತಿ, ಸಿ.ಸಿ. ಪಾಟೀಲ, ಬಾಗಲಕೋಟೆ ಸಂಸದ ಪಿ.ಸಿ. ಗದ್ದಿಗೌಡರ, ಶಾಸಕ ವೀರಣ್ಣ ಚರಂತಿಮಠ, ಸಿದ್ದು ಸವದಿ, ವಿಧಾನಪರಿಷತ್ ಸದಸ್ಯ ಅರುಣ ಶಹಾಪೂರ, ಶಾಸಕ ದೊಡ್ಡನಗೌಡ ಪಾಟೀಲ್, ಯಶವಂತರಾಯಗೌಡ ಪಾಟೀಲ, ಸೋಮನಗೌಡ ಪಾಟೀಲ ಸಾಸನೂರ ,ಕೆಎಸ್ ಆರ್ ಟಿಸಿ ಎಂಡಿ ಶಿವಯೋಗಿ ಕಳಸದ, ಜಿಲ್ಲಾಧಿಕಾರಿ ಪಿ.ಸುನೀಲಕುಮಾರ, ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾ.ರಾಜೇಂದ್ರ ಸೇರಿದಂತೆ ವಿಜಯಪುರ ಬಾಗಲಕೋಟೆ ಜಿಲ್ಲೆಗಳ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.