ರಾಜ್ಯದಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಹಿಂದೆಂದೂ ನಡೆದಿರದ ಅಭೂತಪೂರ್ವ ಕನ್ನಡ ಉತ್ಸವ ನಡೆಸಲು ಸರ್ಕಾರ ಸಕಲ ಸಿದ್ಧತೆಗಳನ್ನು ನಡೆದಿವೆ.
ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 28 ರಂದು 1,000 ಸ್ಥಳಗಳಲ್ಲಿ ವಿಶ್ವದಾದ್ಯಂತ ಸುಮಾರು ಐದು ಲಕ್ಷ ಗಾಯಕರು ಮೂರು ಅಪ್ರತಿಮ ಕವಿಗಳು ಬರೆದ ಕನ್ನಡ ಗೀತೆಗಳನ್ನು ಹಾಡಲಿದ್ದಾರೆ, ಇದು ಕನ್ನಡದ ಹೆಮ್ಮೆಯನ್ನು ಎತ್ತಿ ಹಿಡಿಯುವ ಒಂದು ಮೆಗಾ-ಈವೆಂಟ್ ಆಗಿರುತ್ತದೆ ಎಂದು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.
ಬೇರೆ ಬೇರೆ ದೇಶಗಳ ಕನ್ನಡಪರ ಸಂಘಟನೆಗಳು ಕೂಡ ಈ ಮಹಾಮೇಳಕ್ಕೆ ಸೇರಲಿದ್ದು, ಅಭೂತಪೂರ್ವ ಕನ್ನಡ ಉತ್ಸವಕ್ಕೆ ನಡೆಸುವಂತ ಸರ್ಕಾರ ಕಣ್ಣಿಟ್ಟಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಂಗಡಿಗರು ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿರುವ ‘ಕನ್ನಡಕ್ಕಾಗಿ ನಾವು’ ಕಾರ್ಯಕ್ರಮದ ಭಾಗವಾಗಲಿದ್ದಾರೆ.
ಇದಕ್ಕೆ ಬೇರ ಬೇರೆ ರಾಜ್ಯಗಳಲ್ಲಿ ನೆಲೆಸಿರುವ ಹಾಗೂ ವಿಶ್ವಾದ್ಯಂತ ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರು, ಕನ್ನಡ ಕೂಟಗಳು ತಮಗೆ ಒದಗಿಸಿರುವ ನಿರ್ದಿಷ್ಟ ಜಾಲತಾಣ ಸಂಪರ್ಕದ ಮೂಲಕ ಒಟ್ಟಿಗೆ ಸೇರಿ ಹಾಡುವ ತಾಂತ್ರಿಕ ಸಂಯೋಜನೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರೂಪಿಸಿದೆ.

ವಿವಿಧ ಕಾಲೇಜುಗಳು ಮತ್ತು ಶಾಲೆಗಳ ವಿದ್ಯಾರ್ಥಿಗಳು ಮತ್ತು ಜನರು ಮೈಸೂರು ಅರಮನೆ, ಹಂಪಿ ಮತ್ತು ಇತರ ಸಾಂಸ್ಕೃತಿಕ ತಾಣಗಳ ಮುಂದೆ ಹಾಡಲಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ಉಡುಪಿ ಶ್ರೀಕೃಷ್ಣ ಮಂದಿರ, ಸಿದ್ದಗಂಗಾ ಮಠ ಮತ್ತು ಚಿತ್ರದುರ್ಗ ಕೋಟೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಸುಪ್ರಸಿದ್ಧ ಸ್ಮಾರಕಗಳ ಮುಂದೆ ಸಾವಿರಾರು ಜನರು ಒಟ್ಟಿಗೆ ನಿಂತು ಈ ಗೀತಗಾಯನದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರ ‘ಬಾರಿಸು ಕನ್ನಡ ಡಿಂಡಿಂಮವ’, ನಿಸಾರ್ ಅಹಮ್ಮದ್ ಅವರ ‘ಜೋಗದ ಸಿರಿ ಬೆಳಕಿನಲ್ಲಿ’ ಹಾಗೂ ಡಾ. ಹಂಸಲೇಖ ಅವರ ‘ಹುಟ್ಟಿದರೇ ಕನ್ನಡ ನಾಡಲ್ಲಿ ಹುಟ್ಟಬೇಕು’- ಈ ಮೂರು ಗೀತೆಗಳು ಅಕ್ಟೋಬರ್ 28 ರಂದು ಬೆಳಿಗ್ಗೆ 11 ಗಂಟೆಗೆ ಏಕ ಕಾಲದಲ್ಲಿ ರಾಜ್ಯಾದ್ಯಂತ ಮೊಳಗಲಿವೆ.