ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ಭಾನುವಾರ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿಸಲಾಯಿತು. ಚಿತ್ರರಂಗದ ಗಣ್ಯರು, ರಾಜಕೀಯ ನಾಯಕರು ಹಾಗೂ ಸಾವಿರಾರು ಅಭಿಮಾನಿಗಳು ಪುನೀತ್’ಗೆ ಕಣ್ಣೀರ ವಿದಾಯ ಹೇಳಿದರು.
ನಟ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಭಾನುವಾರ ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದ್ದು, 5ನೇ ದಿನ ಹಾಲು-ತುಪ್ಪ ಬಿಡುವ ಕಾರ್ಯವನ್ನು ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಈ ನಡುವೆ ಕಂಠೀರವ ಸ್ಟುಡಿಯೋ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಹೇಳಿಕೆ ನೀಡಿದ್ದಾರೆ. ಮಂಗಳವಾರದವರೆಗೆ ಕಂಠೀರವ ಸ್ಟುಡಿಯೋ ಒಳಗೆ ಸಾರ್ವಜನಿಕರಿಗೆ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ.
ಅಂತ್ಯಕ್ರಿಯೆ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಪುನೀತ್ ಪತ್ನಿ ಅಶ್ವಿನಿ, ಮಕ್ಕಳಾದ ಧೃತಿ ಹಾಗೂ ವಂದಿತಾ, ಸಹೋದರರಾದ ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಕಣ್ಣೀರು ಹಾಕುತ್ತಿರುವ ದೃಶ್ಯ ಮನ ಕಲಕುವಂತಿತ್ತು. ಚಿತ್ರರಂಗ ಹಾಗೂ ರಾಜಕೀಯದ ಅನೇಕ ಗಣ್ಯರು ಭಾಗಿ ಆಗಿದ್ದರು. ಕಂಠೀರವ ಸ್ಟುಡಿಯೋ ಆವರಣದ ಒಳಗೆ ಕುಟುಂಬದವರಿಗೆ ಮತ್ತು ಗಣ್ಯರಿಗೆ ಮಾತ್ರ ಪ್ರವೇಶ ನೀಡಲಾಗಿತ್ತು.