ಕೋವಿಡ್ 19 ಸಾಂಕ್ರಾಮಿಕ ರೋಗದಿಂದ ಶಾಲೆಗೆ ತೆರಳುವ ಮಕ್ಕಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆ ಕಂಡಿದ್ದು, ಮಕ್ಕಳ ಶಿಕ್ಷಣದಲ್ಲಿಯೂ ಏರುಪೇರಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದ 34,000 ಮಕ್ಕಳು ಶಾಲೆಯಿಂದ ಹೊರಗುಳಿದಿರುವ ವರದಿ ಬಹಿರಂಗವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲೇ 6,000 ಮಕ್ಕಳು ಶಿಕ್ಷಣದಿಂದ ವಂಚಿತರಾಗಿರುವುದಾಗಿ ಸಮೀಕ್ಷೆ ತಿಳಿಸಿದೆ.
ಭಾರತದ ಐಟಿ ರಾಜಧಾನಿಯಾಗಿರುವ ಬೆಂಗಳೂರಿನಲ್ಲಿಯೇ ಹೆಚ್ಚಿನ ಮಕ್ಕಳು ಶಾಲೆಗೆ ಹೋಗದೇ ಇರುವುದು ತಿಳಿದುಬಂದಿದೆ. ಇದಕ್ಕಾಗಿಯೇ ಮನೆಮೆನೆಗೆ ತೆರಳಿ ಸಮೀಕ್ಷೆ ನಡೆಸಿದಾಗ ಅಂತಿಮ ವರದಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ವರದಿಯಾಗಿದೆ.
ಈ ಸಮೀಕ್ಷೆಯು ಮಕ್ಕಳು ಶಿಕ್ಷಣದಿಂದ ವಂಚಿತರಾಗಲು ಪ್ರಮುಖ ಕಾರಣಗಳನ್ನು ಬಹಿರಂಗಪಡಿಸಿದ್ದು, ಅವುಗಳಲ್ಲಿ ಪ್ರಮುಖವಾಗಿ, ಆರೋಗ್ಯ ಸಮಸ್ಯೆಗಳು, ಆರ್ಥಿಕ ಬಿಕ್ಕಟ್ಟು ಮತ್ತು ಕೌಟುಂಬಿಕ ಸಮಸ್ಯೆಗಳಿಂದ ಮಕ್ಕಳಿಗೆ ಶಾಲಾ ಮೆಟ್ಟಿಲೇರಲು ಸಾಧ್ಯವಾಗುತ್ತಿಲ್ಲ ಎಂದು ತಿಳಿದುಬಂದಿದೆ.

ಸರ್ವ ಶಿಕ್ಷಣ ಅಭಿಯಾನದಡಿ ಸಮಗ್ರ ಶಿಕ್ಷಣ ಕರ್ನಾಟಕ (ಎಸ್‌ಎಸ್‌ಕೆ) ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದಲ್ಲಿ 34,411 ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ವರದಿ ಮಾಡಿದೆ. ಇದರಲ್ಲಿ ದಾಖಲೇ ಆಗದವರು, ಶಾಲೆ ಬಿಟ್ಟ ಮಕ್ಕಳು ಕೂಡ ಸೇರಿದ್ದಾರೆ. ಇವರಲ್ಲಿ 6,608 ಮಂದಿ ಬಿಬಿಎಂಪಿ ವ್ಯಾಪ್ತಿಯವರೇ ಆಗಿದ್ದಾರೆ.
ಸಮಗ್ರ ಶಿಕ್ಷಣ ಕರ್ನಾಟಕದ ಸಮೀಕ್ಷೆಯ ವಿವರಗಳನ್ನು ಜಿಲ್ಲಾ ಮಟ್ಟದಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಾಗಿದೆ. ತಾಲ್ಲೂಕು ಮತ್ತು ಬ್ಲಾಕ್ ಮಟ್ಟದ ಅಧಿಕಾರಿಗಳೊಂದಿಗೆ ಅಂಕಿ ಅಂಶಗಳನ್ನು ಹಂಚಿಕೊಳ್ಳಲು ಅಧಿಕಾರಿಗಳನ್ನು ಕೇಳಲಾಗಿದೆ. ಈ ಅಧಿಕಾರಿಗಳು ಶಾಲೆಯಿಂದ ಹೊರಗುಳಿದ ಮಕ್ಕಳ ಪೋಷಕರನ್ನು ಭೇಟಿಯಾಗಿ ಅವರು ಶಾಲೆಗಳಿಂದ ದೂರವಿರಲು ಕಾರಣಗಳನ್ನು ತಿಳಿದುಕೊಳ್ಳುವುದರ ಜೊತೆಗೆ ವರದಿಯನ್ನು ಸಲ್ಲಿಸಬೇಕಾಗಿದೆ.
ಉಡುಪಿ ಜಿಲ್ಲೆಯಲ್ಲಿ ಅತ್ಯಂತ ಕಡಿಮೆ ಶಿಕ್ಷಣವಂಚಿತರು!
ಬಿಬಿಎಂಪಿ ವ್ಯಾಪ್ತಿಯಲ್ಲಿ 14 ರಿಂದ 16 ವಯಸ್ಸಿನೊಳಗಿನ 4,465 ಮಕ್ಕಳು ಶಾಲೆಗೆ ಹೋಗುತ್ತಿಲ್ಲ. 6 ರಿಂದ 14 ವಯಸ್ಸಿನೊಳಗಿನ 2,143 ಮಕ್ಕಳು ಶಾಲೆಗಳಿಂದ ಹೊರಗುಳಿದ್ದಿದ್ದಾರೆ. ಬೀದರ್ ಜಿಲ್ಲೆ 2,609 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದು, ಉಡುಪಿ ಜಿಲ್ಲೆಯಲ್ಲಿ ಕೇವಲ 172 ಮಂದಿ ಮಕ್ಕಳಷ್ಟೇ ಶಿಕ್ಷಣದಿಂದ ವಂಚಿತರಾಗಿದ್ದಾರೆ.
ಸಾಂಕ್ರಾಮಿಕ ರೋಗದ ಸಮಯದಲ್ಲಿ ಮನೆಯ ಹಿರಿಯ ಮಕ್ಕಳು ಮನೆಯವರನ್ನು ಬಿಟ್ಟು ತಮ್ಮದೇ ಉದ್ಯೋಗಗಳ ಕಡೆಗೆ ಮುಖ ಮಾಡಿದ್ದಾರೆ. 31 ಜಿಲ್ಲೆಗಳಲ್ಲಿ 21,300 ರಷ್ಟು ಮಕ್ಕಳು ವಿವಿಧ ಕಾರಣಗಳಿಂದ ಶಾಲೆ ತೊರೆದಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇತ್ತೀಚೆಗೆ, ಕರ್ನಾಟಕ ಹೈಕೋರ್ಟ್ ಹೆಚ್ಚಿನ ಸಂಖ್ಯೆಯ ಮಕ್ಕಳು ಶಿಕ್ಷಣದಿಂದ ವಂಚಿತರಾದವರನ್ನು ಗಮನಿಸಿ, ಮನೆ-ಮನೆಗೆ ತೆರಳಿ ಸಮೀಕ್ಷೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿತ್ತು.