ಭಾನುವಾರ ನಡೆದ ಸಂಯುಕ್ತ ಕಿಸಾನ್ ಮೋರ್ಚಾದ ಸಭೆಯಲ್ಲಿ ಮೂರು ಕೃಷಿ ಕಾನೂನುಗಳ ವಿರುದ್ಧ ರೈತ ಹೋರಾಟ ಚಟುವಟಿಕೆಗಳನ್ನು ಮುಂದುವರಿಸಲು ನಿರ್ಧರಿಸಿತು. ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೃಷಿ ಕಾನೂನುಗಳನ್ನು ರದ್ದುಗೊಳಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಘೋಷಿಸಿದ ಹಿನ್ನೆಲೆಯಲ್ಲಿ ಸಭೆ ನಡೆಯಿತು.
ಸಂಯುಕ್ತ ಕಿಸಾನ್ ಮೋರ್ಚಾ (SKM) ಕಾಯ್ದೆ ಹಿಂಪಡೆದ ಕ್ರಮವನ್ನು ಸ್ವಾಗತಿಸಿದೆ, ಆದರೆ ಸಂಸತ್ತಿನಲ್ಲಿ ಶಾಸನಗಳನ್ನು ಔಪಚಾರಿಕವಾಗಿ ರದ್ದುಗೊಳಿಸಿದ ನಂತರ ರೈತರು ತಮ್ಮ ಆಂದೋಲನವನ್ನು ಕೊನೆಗೊಳಿಸಲು ನಿರ್ಧರಿಸುತ್ತಾರೆ ಎಂದು ಒತ್ತಿಹೇಳಿದ್ದಾರೆ.
ಇದಕ್ಕೂ ಮುನ್ನ, ಭಾನುವಾರ ನಡೆದ ಎಸ್‌ಕೆಎಂ ಸಭೆಯಲ್ಲಿ ಭಾಗವಹಿಸಿದ್ದ ಮುಖಂಡರು ತಮ್ಮ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಗಳಿಗೆ ಪರಿಹಾರ ಮತ್ತು ಪ್ರತಿಭಟನಾಕಾರರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲು ಒತ್ತಾಯಿಸಿದ್ದಾರೆ.
ರೈತರ ಪ್ರತಿಭಟನೆಯ ನಾಯಕ ಬಲ್ಬೀರ್ ಸಿಂಗ್ ರಾಜೇವಾಲ್ ಅವರು ANI ಜೊತೆ ಮಾತನಾಡಿ, “ನಾವು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಚರ್ಚಿಸಿದ್ದೇವೆ. ಇದಾದ ಬಳಿಕ ಕೆಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. SKM ನ ಪೂರ್ವನಿರ್ಧರಿತ ಹೋರಾಟದ ಚಟುವಟಿಕೆಗಳು ಯಥಾಸ್ಥಿತಿಯಲ್ಲಿ ಮುಂದುವರಿಯಲಿವೆ – ನವೆಂಬರ್ 22 ರಂದು ಲಕ್ನೋದಲ್ಲಿ ಕಿಸಾನ್ ಪಂಚಾಯತ್, 26 ರಂದು ಎಲ್ಲಾ ಗಡಿಗಳಲ್ಲಿ ಸಭೆಗಳು ಮತ್ತು 29 ರಂದು ಸಂಸತ್ತಿಗೆ ಮೆರವಣಿಗೆ ನಡೆಯಲಿದೆ.

ರೈತರು ತಮ್ಮ ಬಾಕಿ ಇರುವ ಬೇಡಿಕೆಗಳನ್ನು ಪ್ರಸ್ತಾಪಿಸಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆಯಲಿದ್ದಾರೆ ಎಂದು ರಾಜವಾಲ್ ಘೋಷಿಸಿದರು. ಕಳೆದ ತಿಂಗಳು ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪ್ರಮುಖ ಆರೋಪಿಯಾಗಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರನ್ನು ವಜಾಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಮುಂದಿನ ಕ್ರಮಗಳ ಕುರಿತು ನವೆಂಬರ್ 27 ರಂದು ಎಸ್‌ಕೆಎಂನ ಮತ್ತೊಂದು ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ರಾಜೇವಾಲ್ ಹೇಳಿದರು.







