ಟೋಲ್ ನಲ್ಲಿ ಮಹಿಳಾ ಸಿಬ್ಬಂದಿ ಮೇಲೆ ವ್ಯಕ್ತಿಯೊಬ್ಬ ಕಾರು ಹಾಯಿಸಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ದೆಹಲಿ-ಮೀರತ್ ಎಕ್ಸ್ಪ್ರೆಸ್ವೇನ ಪರಾತ್ಪುರ್ ಪ್ರದೇಶದ ಕಾಶಿ ಟೋಲ್ ಪ್ಲಾಜಾದಲ್ಲಿ ಈ ಘಟನೆ ನಡೆದಿದೆ.
ಈ ದೃಶ್ಯಾವಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆ ಕಾರಿನ ಮುಂದೆ ನಿಂತು ಮಾತನಾಡಿದ್ದಾರೆ. ಈ ವೇಳೆ ಕಾರು ಚಾಲಕ ಮಹಿಳೆಯ ಮೇಲೆಯೇ ಕಾರು ಹಾಯಿಸಿದ್ದಾನೆ. ಮಹಿಳೆ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ನಂತರ ಕಾರು ಮತ್ತಷ್ಟು ವೇಗವಾಗಿ ಮುಂದೆ ಹೋದಾಗ ಅವರು ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ದೆಹಲಿಯಿಂದ ಕಾರಿನಲ್ಲಿ ಬಂದಿದ್ದ ವ್ಯಕ್ತಿ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಟೋಲ್ ಕೇಳಿದಾಗ ಸಿಬ್ಬಂದಿ ಮೇಲೆ ಕಾರು ಚಲಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಇದೊಂದು ಗಂಭೀರ ಘಟನೆಯಾಗಿದ್ದು, ಇಂತಹ ಘಟನೆಗಳು ಮರುಕಳಿಸದಂತೆ ಆಡಳಿತವು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಶಿ ಟೋಲ್ ಪ್ಲಾಜಾದ ವ್ಯವಸ್ಥಾಪಕ ಅನಿಲ್ ಶರ್ಮಾ ಮನವಿ ಮಾಡಿದ್ದಾರೆ. ಈ ಕುರಿತು ದೂರು ದಾಖಲಾಗಿದ್ದು, ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.