ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 17) 76ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. 1950ರ ಸೆಪ್ಟೆಂಬರ್ 17ರಂದು ಗುಜರಾತ್‌ನ ವಡನಗರದಲ್ಲಿ ಜನಿಸಿದ ಪ್ರಧಾನಿ ಮೋದಿಗೆ ದೇಶದ ವಿವಿಧ ರಾಜಕೀಯ ಪಕ್ಷಗಳ ನಾಯಕರು ಸೇರಿದಂತೆ ಹಲವು ಗಣ್ಯರು ಶುಭಾಶಯ ಕೋರಿದ್ದಾರೆ.ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ಕಾಂಗ್ರೆಸ್ ಅಧ್ಯಕ್ಷಶಿರ್ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ಇಬ್ಬರೂ ತಮ್ಮ ಸಂದೇಶಗಳಲ್ಲಿ ಪ್ರಧಾನಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಹಾಗೂ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಸೇರಿದಂತೆ ಹಲವು ನಾಯಕರು ಕೂಡ ಪ್ರಧಾನಿ ಮೋದಿಗೆ ಶುಭಾಶಯ ಸಲ್ಲಿಸಿದ್ದಾರೆ. ವಿವಿಧ ಪಕ್ಷಗಳ ನಾಯಕರು ಸಾಮಾಜಿಕ ಮಾಧ್ಯಮಗಳ ಮೂಲಕ ತಮ್ಮ ಶುಭಾಶಯಗಳನ್ನು ಹಂಚಿಕೊಂಡಿದ್ದಾರೆ.ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಕೂಡ ಪ್ರಧಾನಿ ಮೋದಿಗೆ ಶುಭಾಶಯ ತಿಳಿಸಿದ್ದಾರೆ. ರಾಷ್ಟ್ರಪತಿ ಮುರ್ಮು ಅವರು ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆಯನ್ನು ಉಲ್ಲೇಖಿಸಿ, ಉತ್ತಮ ಆಡಳಿತ ಮತ್ತು ಸಮಗ್ರ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳನ್ನು ಪ್ರಸ್ತಾಪಿಸಿದ್ದಾರೆ. ಜೊತೆಗೆ ಪ್ರಧಾನಿ ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಹಾರೈಸಿದ್ದಾರೆ.

ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ತಮ್ಮ ಸಂದೇಶದಲ್ಲಿ ಭಾರತದ ಆರ್ಥಿಕ ಪ್ರಗತಿ, ಡಿಜಿಟಲ್ ಪರಿವರ್ತನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿನ ಬೆಳವಣಿಗೆಯನ್ನು ಉಲ್ಲೇಖಿಸಿದ್ದಾರೆ. 25 ಕೋಟಿಗೂ ಹೆಚ್ಚು ಭಾರತೀಯರು ತೀವ್ರ ಬಡತನದಿಂದ ಹೊರಬಂದಿದ್ದಾರೆ ಎಂಬ ಅಂಕಿಅಂಶವನ್ನೂ ಅವರು ತಮ್ಮ ಸಂದೇಶದಲ್ಲಿ ಪ್ರಸ್ತಾಪಿಸಿದ್ದಾರೆ.
ಪ್ರಧಾನಿ ಮೋದಿಯವರ 76ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತಿದ್ದು, ರಾಜಕೀಯ ಕ್ಷೇತ್ರದ ಹಲವು ನಾಯಕರು ಶುಭಾಶಯ ಸಂದೇಶಗಳ ಮೂಲಕ ತಮ್ಮ ಹಾರೈಕೆಗಳನ್ನು ತಿಳಿಸಿದ್ದಾರೆ.





