“ಬೆಂಗಳೂರಿನ ರಸ್ತೆಗಳು ಪದೇ ಪದೆ ಕಿತ್ತು ಬರುತ್ತಿರುವ ಹಿನ್ನೆಲೆಯಲ್ಲಿ ಶಾಶ್ವತ ರಸ್ತೆಗಳನ್ನು ನಿರ್ಮಿಸಲು ₹1800 ಕೋಟಿ ವೆಚ್ಚದಲ್ಲಿ 157 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಿಸಲಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
“ಬ್ರ್ಯಾಂಡ್ ಬೆಂಗಳೂರು, ಸುಗಮ ಸಂಚಾರ ಬೆಂಗಳೂರು” ಪರಿಕಲ್ಪನೆಯಡಿ ಚಾಮರಾಜಪೇಟೆ, ಗಾಂಧಿನಗರ, ಮಲ್ಲೇಶ್ವರ, ಮಹಾಲಕ್ಷ್ಮೀಪುರಗಳಲ್ಲಿ ₹200 ಕೋಟಿ ವೆಚ್ಚದಲ್ಲಿ 19.67 ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಕಾಮಗಾರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಸೋಮವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಗುಂಡಿಗಳು ಬೀಳಬಾರದು ಎಂಬ ಉದ್ದೇಶದಿಂದ ವೈಟ್ ಟಾಪಿಂಗ್ ರಸ್ತೆ ಮಾಡಲಾಗುತ್ತಿದೆ. ಈ ರಸ್ತೆಗಳು ಸುಮಾರು 25 ವರ್ಷಗಳ ಕಾಲ ಬಾಳಿಕೆ ಬರುತ್ತವೆ.
ನಿತ್ಯ ಮೂರ್ನಾಲ್ಕು ವಾರ್ಡ್ ಗಳಲ್ಲಿ ಈ ರಸ್ತೆ ಕಾಮಗಾರಿಗೆ ಚಾಲನೆ ನೀಡಲಾಗುವುದು. ಕಾಲಮಿತಿಯಲ್ಲಿ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು.
ಸಂಚಾರ ದಟ್ಟಣೆ ಸಮಸ್ಯೆ ಬಗೆಹರಿಸಲು 200 ಕಿ.ಮೀ ನಷ್ಟು ಹೊಸ ರಸ್ತೆ ನಿರ್ಮಾಣ ಮಾಡಲು ತೀರ್ಮಾನ ಮಾಡಿದ್ದು, ಉನ್ನತ ಗುಣಮಟ್ಟಕ್ಕಾಗಿ ವೈಟ್ ಟಾಪಿಂಗ್ ಮಾಡಲು ಸೂಚಿಸಲಾಗಿದೆ” ಎಂದು ತಿಳಿಸಿದರು.