ಚಾಮರಾಜನಗರ: ಜಿಲ್ಲೆಯಲ್ಲಿ ಕೈಗಾರಿಕಾ ಟೌನ್ ಶಿಪ್ ಆರಂಭಿಸುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಚಾಮರಾಜನಗರ ಮತ್ತು ಗುಂಡ್ಲುಪೇಟೆಯ 754 ಕೋಟಿ ರೂ.ಗಳ ಯೋಜನೆಯ ಎರಡು ಪ್ರಸ್ತಾವನೆಗಳನ್ನು ಮಂಡಳಿ ಸಭೆಗೆ ಅನುಮೋದನೆಗೆ ಕಳುಹಿಸಲಾಗಿದ್ದು, ಶೀಘ್ರದಲ್ಲಿಯೇ ಅನುಮೋದನೆಯಾಗಲಿದೆ. ಅಲ್ಲದೇ ಜಿಲ್ಲೆಯ ಕೆರೆಗಳನ್ನು ತುಂಬಿಸಲು 1100 ಕೋಟಿ ರೂ.ಗಳ ಡಿಪಿಆರ್ ಸಿದ್ಧವಾಗಿದ್ದು, ಇದಕ್ಕೆ ಅನುಮೋದನೆಯಾದರೆ ಜಿಲ್ಲೆಯ ಎಲ್ಲಾ ಕೆರೆಗಳನ್ನು ತುಂಬಿಸುವ ಬೃಹತ್ ಯೋಜನೆಯಾಗಲಿದ್ದು, ಈ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ ಎಂದು ಭರವಸೆ ನೀಡಿದರು.
ಜಿಲ್ಲೆಯ ಎಲ್ಲಾ ಕೆರೆ ತುಂಬಿಸುವ ಯೋಜನೆಯನ್ನು ಈಗಾಗಲೇ ಕೈಗೆತ್ತಿಕೊಳ್ಳಲಾಗಿದೆ. ನೀರಾವರಿಯ ಐದು ಯೋಜನೆಗಳಿಗೆ ಮಂಜೂರಾತಿ ನೀಡಿ 694 ಕೋಟಿ ರೂ.ಗಳ ವೆಚ್ಚದಲ್ಲಿ 63 ಕೆರೆಗಳನ್ನು 2 ಯೋಜನೆಗಳಲ್ಲಿ ಪೂರ್ಣಗೊಳಿಸಿದ್ದು, ಗುಂಡ್ಲುಪೇಟೆ, ಮಟೇಹಳ್ಳ, ಕುಡ್ತರಿಹಳ್ಳ ಸೇರಿದಂತೆ ಇನ್ನೂ 3 ಯೋಜನೆಗಳನ್ನು 121 ಕೆರೆಗಳನ್ನು ತುಂಬಿಸುವ ಯೋಜನೆಗಳನ್ನು ಪೂರ್ಣಗೊಳಿಸಿದೆ ಎಂದರು.
ಕೈಗಾರಿಕಾ ಟೌನ್ ಶಿಪ್ : ಚಾಮರಾಜನಗರ ಜಿಲ್ಲೆಯನ್ನು ಕೈಗಾರಿಕಾ ಜಿಲ್ಲೆಯಾಗಿ ಪರಿವರ್ತಿಸಲು ಸಾಧ್ಯವಿದೆ. ಈಗಾಗಲೇ ಕೈಗಾರಿಕೆಗಳ ಸ್ಥಾಪನೆಗೆ ಕ್ರಮಕೈಗೊಳ್ಳಲಾಗಿದ್ದು, ಜಿಲ್ಲೆಯಲ್ಲಿ ಕೈಗಾರಿಕಾ ಟೌನ್‍ಶಿಪ್ ಸ್ಥಾಪಿಸಿ, ಸಾವಿರ ಎಕರೆ ಪ್ರದೇಶದಲ್ಲಿ ಬೃಹತ್, ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳನ್ನು ಮಂಜೂರಾತಿ ಮಾಡಲಾಗುವುದು. ಯುವಕರಿಗೆ ಕೆಲಸ ಸಿಗಬೇಕು ಎಂಬ ಕಾರಣದಿಂದ ಚಾಮರಾಜನಗರಕ್ಕೆ ಈ ಯೋಜನೆಗಳಿಗೆ ಮಂಜೂರಾತಿ ನೀಡಲಾಗುವುದು ಎಂದರು.
ಆಕಾಂಕ್ಷಿ ತಾಲ್ಲೂಕುಗಳು:
ಜಿಲ್ಲೆಯ ಎಲ್ಲ ತಾಲ್ಲೂಕುಗಳನ್ನು ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕು ಎಂದು ಪರಿಗಣಿಸಲಾಗಿದೆ. ಇಲ್ಲಿ ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣದ ಬಗ್ಗೆ ಗಮನಹರಿಸಲಾಗಿದೆ. ಒಂದೇ ವರ್ಷದಲ್ಲಿ ರಾಜ್ಯದಲ್ಲಿ 8 ಸಾವಿರ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. 100 ಪಿಹೆಚ್ ಸಿ ಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರಿಗೆ ಕಣ್ಣಿನ ಚಿಕಿತ್ಸೆ, ಕನ್ನಡಕ, ಶ್ರವಣ ಸಾಧನಗಳನ್ನು ಒದಗಿಸಲಾಗುತ್ತಿದೆ. ಡಯಾಲಿಸಿಸ್ ಸೈಕಲ್ಸ್ ಹೆಚ್ಚಳ, ಕ್ಯಾನ್ಸರ್ ಚಿಕಿತ್ಸೆ ಕೇಂದ್ರಗಳ ಹೆಚ್ಚಳ ಮಾಡಲಾಗಿದೆ. ಆರೋಗ್ಯ ಅಭಿವೃದ್ಧಿ ಮತ್ತು ದುಡಿಯುವ ವರ್ಗಕ್ಕೆ ಬೆಂಬಲ ನೀಡಲಾಗುತ್ತಿದೆ. ಕೃಷಿಕರು ಆರ್ಥಿಕವಾಗಿ ಸದೃಢರಾಗಬೇಕು. ಶೂನ್ಯಬಡ್ಡಿದರದಲ್ಲಿ ಕೃಷಿ ಸಾಲ, ಯಶಸ್ವಿನಿ ಯೋಜನೆ ಪುನರಾರಂಭ, 600 ಕೋಟಿ ರೂ. ವೆಚ್ಚದಲ್ಲಿ ರೈತಶಕ್ತಿ ಯೋಜನೆ, ರೈತ ವಿದ್ಯಾನಿಧಿ ಜಾರಿ ಮಾಡಲಾಗಿದೆ. ಕುಂಬಾರರು, ಕಮ್ಮಾರ ಸೇರಿದಂತೆ ಕುಲಕಸುಬುದಾರರಿಗೆ ಧನಸಹಾಯ ಮಾಡುವ ಯೋಜನೆ ಜಾರಿ ಮಾಡಲಾಗಿದೆ. ಸ್ತ್ರೀ ಸಾಮರ್ಥ್ಯ ಯೋಜನೆ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಗಳಿಂದ 5 ಲಕ್ಷ ಮಹಿಳೆಯರಿಗೆ ಹಾಗೂ 5 ಲಕ್ಷ ಯುವಕರಿಗೆ ಸ್ವಯಂ ಉದ್ಯೋಗ ಕಲ್ಪಿಸಲಾಗುತ್ತಿದೆ ಎಂದರು.
ಸಮಾರಂಭದಲ್ಲಿ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎಸ್.ನಿರಂಜನ ಕುಮಾರ್, ಮರಿತಿಬ್ಬೇಗೌಡ, ಸಂಸದ ಶ್ರೀನಿವಾಸ ಪ್ರಸಾದ್ ಇನ್ನಿತರರು ಇದ್ದರು