ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸಿರುವ ನಟ ದರ್ಶನ್ – ಬೆನ್ನುಹುರಿ, ರಕ್ತ ಸಂಚಾರದಲ್ಲಿ ಸಮಸ್ಯೆ ಕೀಲು ನೋವು ಸಮಸ್ಯೆ ಹಾಗೂ ಕಿಡ್ನಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರಿಗೆ ಸಮಯಕ್ಕೆ ಸರಿಯಾಗಿ ಶಸ್ತ್ರಚಿಕಿತ್ಸೆ ಮಾಡಿಸದಿದ್ರೆ, ಅವರು ಲಕ್ವ (ಪಾರ್ಶ್ವವಾಯು)ಗೆ ತುತ್ತಾಗುವ ಅಪಾಯವಿದೆ ಎಂದು ದರ್ಶನ್ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುವುದಕ್ಕಾಗಿ ಮಧ್ಯಂತರ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ.
ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರನ್ನು ಬಳ್ಳಾರಿ ಜೈಲಿನಲ್ಲಿ ಇರಿಸಲಾಗಿದೆ. ಹಲವು ಬಾರಿ ಅವರ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ಇದೀಗ, ಆರೋಗ್ಯ ಸಮಸ್ಯೆ ಕಾರಣಕ್ಕಾಗಿ ಅವರಿಗೆ ಜಾಮೀನುನ ನೀಡಬೇಕೆಂದು ದರ್ಶನ್ ಪರ ವಕೀಲರು ಹೈಕೋರ್ಟ್ ಮೊರೆಹೋಗಿದ್ದಾರೆ.
ದರ್ಶನ್ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿದೆ.ವಿಚಾರಣೆ ವೇಳೆ ವಾದ ಮಂಡಿಸಿದ ದರ್ಶನ್ ಪರ ವಕೀಲ.
ದರ್ಶನ್ ಪರ ಹಾಜರಿದ್ದ ಹಿರಿಯ ವಕೀಲ ಸಿ.ವಿ.ನಾಗೇಶ್, “ದರ್ಶನ್ ತೀವ್ರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿದ್ದಾರೆ. ಅವರಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಮಾಡಿಸುವ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಗಲು ದರ್ಶನ್‌ಗೆ ಜಾಮೀನು ನೀಡಬೇಕು” ಎಂದು ಮನವಿ ಮಾಡಿದ್ದಾರೆ.
ಪ್ರತಿವಾದ ಮಂಡಿಸಿದ ಪ್ರಕರಣದ ವಿಶೇಷ ಪ್ರಾಸಿಕ್ಯೂಟರ್ ಪಿ.ಪ್ರಸನ್ನ ಕುಮಾರ್, “ದರ್ಶನ್ ಆರೋಗ್ಯಕ್ಕೆ ಸಂಬಂಧಿಸಿದ ವೈದ್ಯಕೀಯ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ಸಲ್ಲಿದ್ದಾರೆ. ಹೀಗಾಗಿ, ಆ ವರದಿಯಲ್ಲಿ ಏನಿದೆ ಎಂಬುದು ನಮಗೆ ಗೊತ್ತಿಲ್ಲ. ವರದಿಯನ್ನು ಕೂಲಂಕಷವಾಗಿ ಪರಿಶೀಲಿಸಬೇಕು. ಹೀಗಾಗಿ, ನಾವು ವರದಿ ಪರಿಶೀಲಿಸಲು ಸಮಯಬೇಕು” ಎಂದರು.