ಕನ್ನಡ ಚಿತ್ರರಂಗದ ನಟಿ ಕೃಷಿ ತಾಪಂಡ ಅವರ ಆಪ್ತ ಗೆಳೆಯ ವೈಶಾಕ್ ಇತ್ತೀಚೆಗೆ ನಟಿಯ ಮನೆಯಲ್ಲೇ ಸಾವಿಗೆ ಶರಣಾಗಿದ್ದರು. ಈ ಘಟನೆಯಿಂದ ಆಘಾತಕ್ಕೊಳಗಾಗಿರುವ ಕೃಷಿ ಘಟನೆ ನಡೆದ ಕೆಲ ದಿನಗಳ ಬಳಿಕ ಸದ್ಯದ ಅವರ ಮಾನಸಿಕ ಸ್ಥಿತಿಗತಿಯ ಬಗ್ಗೆ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್‌ಗಳನ್ನು ಹಂಚಿಕೊಳ್ಳುವ ನೋವು ತೋಡಿಕೊಂಡಿದ್ದಾರೆ.

‘ಇಂತಹದ್ದೊಂದು ಬರಹವನ್ನು ಬರೆಯಬೇಕಾಗಿ ಬರುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ನನಗೆ ಈ ಸಮಯದಲ್ಲಿ ಯಾವುದೇ ಸಾರ್ವಜನಿಕ ಹೇಳಿಕೆ ನೀಡುವ ಮಾನಸಿಕ ಶಕ್ತಿ ಇಲ್ಲದಿದ್ದರೂ, ಸುತ್ತಲೂ ಕೇಳಿಬರುತ್ತಿರುವ ನಿರಂತರ ಊಹಾಪೋಹಗಳು ಮತ್ತು ಪ್ರಶ್ನೆಗಳಿಂದಾಗಿ ಈ ಸ್ಪಷ್ಟನೆ ನೀಡುತ್ತಿದ್ದೇನೆ. ನನಗೆ ಅತ್ಯಂತ ಆಪ್ತರಾಗಿದ್ದ, ನನ್ನನ್ನು ರಕ್ಷಿಸುತ್ತಿದ್ದ ವ್ಯಕ್ತಿಯನ್ನು ಕಳೆದುಕೊಂಡ ನೋವಿನಲ್ಲಿ ನಾನಿದ್ದೇನೆ. ಈ ನಷ್ಟದಿಂದ ಹೊರಬರಲು ನನಗೆ ಸಾಧ್ಯವಾಗುತ್ತಿಲ್ಲ’

‘ಅವರ ಕುಟುಂಬದವರು ದೊಡ್ಡ ನಷ್ಟವನ್ನು ಅರಗಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ನಿರಂತರವಾಗಿ ಕಥೆಗಳನ್ನು ಸೃಷ್ಟಿಸಲಾಗುತ್ತಿದೆ. ಇಲ್ಲಿ ಒಂದು ಕುಟುಂಬ ತನ್ನ ಮಗನನ್ನು ಕಳೆದುಕೊಂಡಿದೆ. ಸ್ನೇಹಿತರು ತಮ್ಮ ಆಪ್ತನನ್ನು ಕಳೆದುಕೊಂಡಿದ್ದಾರೆ. ಪ್ರತಿಯೊಂದು ಅನಗತ್ಯ ಪ್ರಶ್ನೆ, ಊಹೆ ಮತ್ತು ವದಂತಿಗಳು ಇಲ್ಲಿ ಉಳಿದು ನೋವು ಅನುಭವಿಸುತ್ತಿರುವವರ ಮೇಲೆ ತೀವ್ರ ಪರಿಣಾಮ ಬೀರುತ್ತವೆ. ನಮಗೆ ಶಾಂತಿಯಿಂದ ದುಃಖಿಸಲು ಬಿಡಿ. ಈ ಬಗ್ಗೆ ಕೆಲವು ಮಾಧ್ಯಮಗಳು ಗೌರವಯುತವಾಗಿ ನಡೆದುಕೊಂಡರೆ, ಇನ್ನು ಕೆಲವು ಕೇವಲ ರಿಯಾಕ್ಷನ್‌ಗಾಗಿ ಒತ್ತಾಯಿಸುತ್ತಿವೆ. ನೀವು ಹೇಗಿದ್ದೀರಾ ಎಂದು ಕೇಳುವ ಬದಲು ನಿಮ್ಮ ರಿಯಾಕ್ಷನ್ ಏನು ಎಂದು ಕೇಳುತ್ತಿದ್ದಾರೆ.’

‘ಸದ್ಯಕ್ಕೆ ಪ್ರತಿಯೊಬ್ಬರಿಗೂ ವೈಯಕ್ತಿಕವಾಗಿ ಉತ್ತರಿಸುವ ಶಕ್ತಿ ನನಗಿಲ್ಲ. ಯಾರಿಗಾದರೂ ಬದುಕಲು ಕಾರಣ ನೀಡಲು ಸಾಧ್ಯವಾಗದಿದ್ದರೆ, ಕನಿಷ್ಠ ಅವರು ಭರವಸೆ ಕಳೆದುಕೊಳ್ಳುವಂತೆ ಮಾಡಬೇಡಿ. ದಯವಿಟ್ಟು ಎಲ್ಲರೂ ದಯೆ ಮತ್ತು ಕರುಣೆಯನ್ನು ಆಯ್ಕೆ ಮಾಡಿಕೊಳ್ಳಿ. ದಯವಿಟ್ಟು ಇದನ್ನು ಇಷ್ಟಕ್ಕೇ ನಿಲ್ಲಿಸಿ’ ಎಂದು ನಟಿ ಕೃಷಿ ತಾಪಂಡ ಮನವಿ ಮಾಡಿದ್ದಾರೆ.






