ತುಮಕೂರು : ಕೊಟ್ಟ ಭರವಸೆಯಂತೆಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದ್ದಾರೆ ಎಂದು ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ. ತುಮಕೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಗ್ಯಾರಂಟಿಗಳ ಅನುಷ್ಠಾನಕ್ಕೆ ನಿನ್ನೆ ತೀರ್ಮಾನವಾಗಿದೆ ಎಂದು ಹೇಳಿದರು.
ಸಂಪನ್ಮೂಲ ಕ್ರೋಢೀಕರಣದ ಬಗ್ಗೆ ವಿಪಕ್ಷಗಳು ಪ್ರಶ್ನೆ ಎತ್ತಿದ್ದರು. ವಿರೋಧ ಪಕ್ಷದವರು ಇದನ್ನೇ ಅಸ್ತ್ರ ಮಾಡಿಕೊಳ್ಳಲು ಮುಂದಾಗಿದ್ದರು. ಆದರೆ ನಾವು ಜನರ ಹಿತಾಸಕ್ತಿಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಹೇಳಿದರು.
ಹಿಂದಿನ ಸರ್ಕಾರದ ಅನಾವಶ್ಯಕ ಯೋಜನೆಗಳು ಹಾಗೂ ಕಾರ್ಯಕ್ರಮಗಳು ಇದ್ದರೆ ಅವುಗಳನ್ನು ಸ್ಥಗಿತಗೊಳಿಸುತ್ತೇವೆ. ಎಲ್ಲಾ ಯೋಜನೆಗಳ ಡಿಪಿಆರ್ ಮಾಡುವಾಗ ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ . ಅಭಿವೃದ್ಧಿ ಕುಂಠಿತವಾಗದಂತೆ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತೇವೆ ಎಂದಿದ್ದಾರೆ.