ಕೋಲಾರ : ಜಿಲ್ಲೆಯ ಬಂಗಾರಪೇಟೆಯಲ್ಲಿ ಬಾಲಕಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸ್ಥಳೀಯ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 37 ವರ್ಷದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಪ್ರಕರಣದ ಕುರಿತು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಘಟನೆ ಬೆಳಕಿಗೆ ಬಂದ ಬೆನ್ನಲ್ಲೇ ಸ್ಥಳೀಯರಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಬಾಲಕಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಆಸ್ಪತ್ರೆ ವೃತ್ತದಲ್ಲಿ ರಾತ್ರಿ ವೇಳೆಯಲ್ಲಿ ಸಾರ್ವಜನಿಕರು ಭಾರೀ ಪ್ರತಿಭಟನೆ ನಡೆಸಿದ್ದಾರೆ.
ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದರಿಂದ ಕೆಲಕಾಲ ಆತಂಕ ಉಂಟಾಗಿ ಪರಿಸ್ಥಿತಿ ಬಿಗಡಾಯಿಸಿತ್ತು. ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ಭದ್ರತೆ ಕೈಗೊಂಡರು. ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್, ಡಿವೈಎಸ್ಪಿ ಲಕ್ಷ್ಮಯ್ಯ, ಬಂಗಾರಪೇಟೆ ಸರ್ಕಲ್ ಇನ್‌ಸ್ಪೆಕ್ಟರ್ ರವಿಕುಮಾರ್ ಸೇರಿದಂತೆ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ನಿಯಂತ್ರಿಸಿದರು.
ಇದನ್ನೂ ಓದಿ : 2024–29ರ ನೀತಿಯಡಿ ರಾಜ್ಯ ಪ್ರವಾಸೋದ್ಯಮಕ್ಕೆ 1,080.97 ಕೋಟಿ ಹೂಡಿಕೆ : ಸಚಿವ ಜಾರ್ಜ್..
ಈ ನಡುವೆ ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹಾಗೂ ಮುಖಂಡ ಶಂಶುದ್ದೀನ್ ಬಾಬು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಮನವೊಲಿಸಿದ್ದಾರೆ. ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧವಾಗಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿ ಪ್ರತಿಭಟನಾಕಾರರನ್ನು ಸಮಾಧಾನಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದು, ಆರೋಪದ ಸತ್ಯಾಸತ್ಯತೆ ಹಾಗೂ ಇತರರ ಪಾತ್ರದ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.






