ರಾಜ್ಯದಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆ, ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಬಿಜೆಪಿ ನಾಯಕರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ನಡೆದ ಸಿಐಎ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬುಧವಾರ ತಡರಾತ್ರಿ ಆಗಮಿಸಿದ್ದ ಅಮಿತ್ ಶಾ, ರಾಜ್ಯದ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದು, ಸಭೆಯಲ್ಲಿ ಮುಖಂಡರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ, ನಗರಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸಭೆ ನಡೆಸಿದ್ದಾರೆ. ಬೆಳಿಗ್ಗೆ 6 ಗಂಟೆಯವರೆಗೂ ನಡೆದ ಸಭೆಯಲ್ಲಿ ಆಡಳಿತ ವೈಖರಿ ಬಗ್ಗೆ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಹಿರಿಯ ಸಚಿವರು ಹಾಗೂ ಆರ್ ಎಸ್ ಎಸ್ ನಾಯಕರು ಸಭೆಯಲ್ಲಿ ಹಾಜರಿದ್ದರು ಎನ್ನಲಾಗಿದೆ.
ಕರಾವಳಿಯಲ್ಲಿ ನಡೆದ ಸರಣಿ ಹತ್ಯೆ ಪ್ರಕರಣಗಳು, ಗುತ್ತಿಗೆದಾರರ ಸಂಘದ ಶೇ.೪೦ರಷ್ಟು ಕಮಿಷನ್ ಆರೋಪ, ಹಿಂದೂಪರ ಸಂಘಟನೆಗಳ ವಿರೋಧಕ್ಕೆ ಗುರಿಯಾಗಿರುವುದು ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ವಿರುದ್ಧ ಅಸಮಾಧಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಮುಂದಿನ ವರ್ಷ ಚುನಾವಣಾ ವರ್ಷವಾಗಿದ್ದು, ಈಗಾಗಲೇ ಸಿದ್ಧತೆ ಆರಂಭವಾಗಿದೆ. ಇಂತಹ ಸಂದರ್ಭದಲ್ಲಿ ಆಡಳಿತ ವಿರೋಧಿ ಅಲೆ ಕಾಣುತ್ತಿರುವುದು ಒಳ್ಳೆಯದಲ್ಲ. ಅಲ್ಲದೇ ಬಿಜೆಪಿಗೆ ಶಕ್ತಿಯಾದ ಹಿಂದೂಗಳ ವಿರೋಧ ಎದುರಿಸುವಂತಾಗಿರುವುದು ಒಳ್ಳೆಯ ಬೆಳವಣಿಗೆ ಅಲ್ಲ. ಆದ್ದರಿಂದ ಕೂಡಲೇ ಡ್ಯಾಮೇಜ್ ಕಂಟ್ರೋಲ್ ಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಮಿತ್ ಶಾ ಸೂಚನೆ ನೀಡಿದ್ದಾರೆ ಎಂದು ಹೇಳಲಾಗಿದೆ.






