ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬರ ಪರಿಸ್ಥಿತಿ ಮತ್ತು ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ರಜಾ ದಿನವಾಗಿದ್ದರೂ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮೂಲತಃ ಸಚಿವ ಸಂಪುಟ ಸಭೆಯನ್ನು ಗುರುವಾರವೇ ನಡೆಸಬೇಕಿತ್ತು. ಆದರೆ ದೆಹಲಿ ಪ್ರವಾಸದ ಕಾರಣದಿಂದ ಸಭೆ ನಡೆಸಲು ಸಾಧ್ಯವಾಗಲಿಲ್ಲ. ಹೀಗಾಗಿ ರಾಜ್ಯದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಭಾನುವಾರ ತುರ್ತು ಸಭೆ ಕರೆಯಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಲಭ್ಯತೆ, ಜಿಲ್ಲಾವಾರು ಸ್ಥಿತಿಗತಿ ಸೇರಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಯಲಿದೆ. ಜೊತೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (CEO) ಸಭೆಯನ್ನೂ ನಡೆಸಿ ಅಗತ್ಯ ಕ್ರಮಗಳ ಕುರಿತು ಸೂಚನೆ ನೀಡಲಾಗುವುದು ಎಂದು ಹೇಳಿದರು.ಈ ವೇಳೆ ಮಂಡ್ಯ ಭಾಗದ ರೈತರಿಗೆ ಮುಖ್ಯಮಂತ್ರಿ ಸ್ಪಷ್ಟ ಸಂದೇಶ ನೀಡಿದರು. ಲಭ್ಯವಿರುವ ನೀರನ್ನು ಕೇವಲ ಕುಡಿಯುವ ನೀರಿನ ಉದ್ದೇಶಕ್ಕಾಗಿ ಮಾತ್ರ ಬಳಸಬೇಕು. ಪ್ರಸ್ತುತ ಪರಿಸ್ಥಿತಿಯಲ್ಲಿ ಕೃಷಿ ಚಟುವಟಿಕೆಗಳಿಗೆ ನೀರನ್ನು ಬಳಸಬಾರದು ಎಂದು ಅವರು ತಿಳಿಸಿದರು.

“ಬಿತ್ತನೆ ಮಾಡಿ ನಂತರ ನೀರು ಬಿಡುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದು ಸರಿಯಲ್ಲ. ಈ ವಿಚಾರದಲ್ಲಿ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ,” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.






