ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಅವರು ಬೆಂಗಳೂರಿನ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನಲ್ಲಿ ರಾಜ್ಯದ ಉನ್ನತ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಸಿದರು.
ಸಭೆಯಲ್ಲಿ ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವುದು, ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಒದಗಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು.

ವಿಶ್ವವಿದ್ಯಾಲಯಗಳ ಗುಣಮಟ್ಟ ಸುಧಾರಣೆಗೆ ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗಬೇಕು ಎಂದು ಸಚಿವರು ಕುಲಪತಿಗಳಿಗೆ ಸೂಚಿಸಿದರು. ತಾಂತ್ರಿಕ ಪರಿಣತಿಯನ್ನು ಬಳಸಿಕೊಂಡು ಶಿಕ್ಷಣದ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸುವ ಅಗತ್ಯವಿದೆ ಎಂದು ಅವರು ಹೇಳಿದರು.ಸರ್ಕಾರಿ ವಿಶ್ವವಿದ್ಯಾಲಯಗಳು ವಿದ್ಯಾರ್ಥಿಗಳ ಮೊದಲ ಆಯ್ಕೆಯಾಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಸರ್ಕಾರಿ ವಿವಿಗಳನ್ನೇ ಆಯ್ಕೆ ಮಾಡುವಂತಹ ಗುಣಮಟ್ಟದ ಶಿಕ್ಷಣ ಹಾಗೂ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸಚಿವರು ತಿಳಿಸಿದರು.

ವಿಶ್ವವಿದ್ಯಾಲಯಗಳಲ್ಲಿ ಸಂಶೋಧನಾ ಚಟುವಟಿಕೆಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳು ಮತ್ತು ಸಂಶೋಧಕರಲ್ಲಿ ಬೆಳೆಸುವ ನಿಟ್ಟಿನಲ್ಲಿ ವಿವಿಗಳು ಕಾರ್ಯನಿರ್ವಹಿಸಬೇಕು ಎಂದು ಬಸವರಾಜ ರಾಯರಡ್ಡಿ ಹೇಳಿದರು.ಸಭೆಯಲ್ಲಿ ವಿವಿಧ ವಿಶ್ವವಿದ್ಯಾಲಯಗಳು ಪ್ರಸ್ತುತ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಸಮಸ್ಯೆಗಳನ್ನು ಹಂತಹಂತವಾಗಿ ಬಗೆಹರಿಸಲು ಸೂಕ್ತ ಕಾರ್ಯಸೂಚಿ ರೂಪಿಸಲಾಗುವುದು ಎಂದು ಸಚಿವರು ತಿಳಿಸಿದರು.

ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳು ತಮ್ಮ ಅಕಾಡೆಮಿಕ್ ಕ್ಯಾಲೆಂಡರ್‌ಗಳನ್ನು ಮುಂಚಿತವಾಗಿಯೇ ಸಿದ್ಧಪಡಿಸಬೇಕು ಎಂದು ಸಚಿವರು ಸೂಚಿಸಿದರು. ಶೈಕ್ಷಣಿಕ ಚಟುವಟಿಕೆಗಳು ನಿಗದಿತ ಸಮಯಕ್ಕೆ ಸರಿಯಾಗಿ ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ವಿಶ್ವವಿದ್ಯಾಲಯಗಳ ಬಲವರ್ಧನೆಗೆ ಸರ್ಕಾರ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡಲಿದೆ. ಶೀಘ್ರದಲ್ಲೇ ರಾಜ್ಯದ ಎಲ್ಲ ಸಾರ್ವಜನಿಕ ವಿಶ್ವವಿದ್ಯಾಲಯಗಳಿಗೆ ಖುದ್ದಾಗಿ ಭೇಟಿ ನೀಡಿ ಅಲ್ಲಿನ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಸ್ಥಿತಿಗತಿಗಳನ್ನು ಪರಿಶೀಲಿಸುವುದಾಗಿ ಸಚಿವ ಬಸವರಾಜ ರಾಯರಡ್ಡಿ ತಿಳಿಸಿದರು.






