ಕ್ಷೇತ್ರದ ಮತದಾರರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಾಯವನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡುತ್ತೇನೆ. ಆಮೇಲೆ ಅವರು ಹೇಳಿದ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತೇನೆ,
ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಕುತೂಹಲ ರಾಜ್ಯದ ಜನರಲ್ಲಿದೆ. ಇದಕ್ಕೆ ಉತ್ತರ ಎಂಬಂತೆ ಕಳೆದ ಎರಡು ದಿನದಿಂದ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರವನ್ನು ಸುತ್ತಾಡಿ ಬಂದಿದ್ದಾರೆ. ತಮ್ಮ ಆಪ್ತರೊಂದಿಗೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದೇ ಅಥವಾ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವುದೇ ಎಂಬ ಅಭಿಪ್ರಾಯವನ್ನು ಸಂಗ್ರಹಿಸುತ್ತಿದ್ದಾರೆ.
ತಿ.ನರಸೀಪುರ ತಾಲೂಕಿನ ವರುಣ ವಿಧಾನಸಭಾ ಕ್ಷೇತ್ರದ ಇಂಡವಾಳು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ”ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದೇನೆ. ಆದರೆ, ವರುಣ ಕ್ಷೇತ್ರದಿಂದಲೇ ಕಣಕ್ಕಿಳಿಯುವಂತೆ ಕ್ಷೇತ್ರದ ಜನರು ಒತ್ತಾಯಿಸುತ್ತಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಗಮನಕ್ಕೆ ತರುತ್ತೇನೆ. ವರಿಷ್ಠರು ಸೂಚಿಸಿದರೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವೆ,” ಎಂದು ತಿಳಿಸಿದರು.
ಹೈಕಮಾಂಡ್ ನಿರ್ಧಾರಕ್ಕೆ ಕಾಯುತ್ತಿದ್ದೇನೆ
”ಕ್ಷೇತ್ರದ ಮತದಾರರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಒತ್ತಾಯವನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುತ್ತೇನೆ. ಹೈಕಮಾಂಡ್ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದನ್ನು ಕಾದು ನೋಡುತ್ತೇನೆ. ಆಮೇಲೆ ಅವರು ಹೇಳಿದ ಕ್ಷೇತ್ರದಲ್ಲಿ ಕಣಕ್ಕಿಳಿಯುತ್ತೇನೆ,” ಎಂದು ಹೇಳಿದರು. ಇದೇ ಸಂದರ್ಭದಲ್ಲಿ ತಾಲೂಕು ಪಂಚಾಯತಿ ಮಾಜಿ ಅಧ್ಯಕ್ಷ ಜಿ.ಎಸ್. ಪ್ರಕಾಶ್, ಎಚ್.ಸಿದ್ದಪ್ಪ, ಶ್ರೀನಿವಾಸ್ ಜೆಡಿಎಸ್ ಪಕ್ಷವನ್ನು ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.