ಅಕ್ರಮ ಸಕ್ರಮ ಯೋಜನೆಯಡಿ ಸಲ್ಲಿಕೆಯಾಗಿರುವ ನಮೂನೆ 50, 53, 57 ಅರ್ಜಿಗಳನ್ನು ಮುಂದಿನ 6 ತಿಂಗಳಲ್ಲಿ ಬಾಕಿ ಉಳಿಸದಂತೆ ಸಂಪೂರ್ಣ ವಿಲೇವಾರಿ ಮಾಡಬೇಕು. ಅಲ್ಲದೆ, ಅರ್ಹ ಫಲಾನುಭವಿಗಳಿಗೆ ಶೀಘ್ರ ಸಾಗುವಳಿ ಚೀಟಿ ನೀಡಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಸೂಚನೆ ನೀಡಿದರು.
ವಿಕಾಸ ಸೌಧದಲ್ಲಿ ಸೋಮವಾರ ಕಂದಾಯ ಇಲಾಖೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆಸಲಾಯಿತು. ಸಭೆಯಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳೂ ಪಾಲ್ಗೊಂಡಿದ್ದರು.
ಈ ವೇಳೆ ವಿಲೇವಾರಿಯಾಗದ ಬಗರ್ ಹುಕುಂ ಅರ್ಜಿಗಳ ಬಗ್ಗೆ ಗಮನ ಸೆಳೆದ ಸಚಿವ ಕೃಷ್ಣ ಬೈರೇಗೌಡ ಅವರು, “ನಮೂನೆ 50, 53, 57ಕ್ಕೆ ಸಂಬಂಧಿಸಿದಂತೆ ಅಕ್ರಮ-ಸಕ್ರಮಗೊಳಿಸಿ ಸಾಗುವಳಿ ಚೀಟಿ ನೀಡಲು ಕೋರಿ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈ ಅರ್ಜಿಗಳು ವಿಲೇವಾರಿಯಾಗದ ಕಾರಣ ರೈತರು ದಿನಂಪ್ರತಿ ಸರ್ಕಾರಿ ಕಚೇರಿಗಳಿಗೆ ಅಲೆಯುವಂತಾಗಿದೆ. ಇದು ಸರಿಯಲ್ಲ. ಹೀಗಾಗಿ ಈ ಎಲ್ಲಾ ಅರ್ಜಿಗಳನ್ನು ಮುಂದಿನ 6 ತಿಂಗಳಲ್ಲಿ ಬಾಕಿ ಉಳಿಸದಂತೆ ವಿಲೇವಾರಿಗೊಳಿಸಬೇಕು, ಅರ್ಹರಿಗೆ ಸಾಗುವಳಿ ಚೀಟಿ ನೀಡಬೇಕು” ಎಂದು ತಿಳಿಸಿದರು.
ಮುಂದುವರೆದು, “ಬಗರ್ ಹುಕುಂ ಅರ್ಜಿ ವಿಲೇವಾರಿ ಸಂದರ್ಭದಲ್ಲಿ ಅಧಿಕಾರಿಗಳು ಯಾವುದೇ ಪ್ರಭಾವಿಗಳ ಅಥವಾ ರಾಜಕೀಯ ಪಕ್ಷದ ನಾಯಕರಿಗೆ ಅನುಕೂಲವಾಗುವಂತೆ ವರ್ತಿಸಬಾರದು, ಬದಲಾಗಿ ಬಡ ಜನರಿಗೆ ಮತ್ತು ಅರ್ಹರಿಗೆ ನ್ಯಾಯ ಒದಗಿಸಲು ಬದ್ಧರಾಗಿರಬೇಕು. ರಾಜ್ಯದ ಜನ ಸಾಕಷ್ಟು ನಿರೀಕ್ಷೆಗಳೊಂದಿಗೆ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನೀಡಿದ್ದು, ಆ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು” ಎಂದು ಕಿವಿಮಾತು ಹೇಳಿದರು.
ಬಗರ್ ಹುಕುಂ ಅರ್ಜಿ ವಿಲೇವಾರಿಗೆ ಆ್ಯಪ್
ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ.
ಹೀಗಾಗಿ ಬಗರ್ ಹುಕುಂ ತಂತ್ರಾಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದು ನ್ಯಾಯಸಮ್ಮತವಾಗಲಿದೆ. ಅಲ್ಲದೆ, ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ.
ಶೀಘ್ರದಲ್ಲೇ ಈ ಆ್ಯಪ್ ಅಧಿಕಾರಿಗಳ ಕೈಸೇರಲಿದೆ. ಈ ಆ್ಯಪ್ ಸಹಾಯದೊಂದಿಗೆ ಅಧಿಕಾರಿಗಳು ತ್ವರಿತಗತಿಯಲ್ಲಿ ಬಹರ್ ಹುಕುಂ ಅರ್ಜಿ ವಿಲೇವಾರಿಗೊಳಿಸಬಹುದು. ಅಲ್ಲದೆ, ಅರ್ಜಿ ವಿಲೇವಾರಿಯಾದ ನಂತರ ಅರ್ಹ ಫಲಾನುಭವಿಗಳಿಗೆ ಇ-ಸಾಗುವಳಿ ಚೀಟಿಯನ್ನೂ ತಂತ್ರಾಂಶದ ಮೂಲಕವೇ ಒದಗಿಸಬಹುದು. ಜನರಿಗೂ ಅನುಕೂಲವಾಗಲಿದೆ ಎಂದು ಸಭೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.