ರಾಜ್ಯದ ಎಲ್ಲಾ ಆಸ್ಪತ್ರೆಗಳು ಹಾಗೂ ಶಾಲೆಗಳ ಆವರಣದಲ್ಲಿರುವ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟವನ್ನು ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರಿನ ವೆನ್ಲಾಕ್ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ನಡೆದ ಕುಂದುಕೊರತೆ ಹಾಗೂ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆಸ್ಪತ್ರೆಗಳು ಮತ್ತು ಶಾಲೆಗಳ ಕ್ಯಾಂಟೀನ್‌ಗಳಲ್ಲಿ ಜಂಕ್ ಫುಡ್ ಮಾರಾಟ ಹೆಚ್ಚುತ್ತಿರುವುದು ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ಹೇಳಿದರು.

ಜಂಕ್ ಫುಡ್‌ನ ಅತಿಯಾದ ಸೇವನೆಯಿಂದ ಮೂತ್ರಪಿಂಡ ಸಂಬಂಧಿತ ಸಮಸ್ಯೆಗಳು, ಕ್ಯಾನ್ಸರ್ ಸೇರಿದಂತೆ ಹಲವು ಗಂಭೀರ ಕಾಯಿಲೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಆಸ್ಪತ್ರೆಗಳಷ್ಟೇ ಅಲ್ಲದೆ 1ರಿಂದ 10ನೇ ತರಗತಿವರೆಗಿನ ಶಾಲೆಗಳ ಸುತ್ತಮುತ್ತಲೂ ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡದಂತೆ ನಿಯಮ ರೂಪಿಸುವ ಉದ್ದೇಶವಿದೆ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಆಸ್ಪತ್ರೆಗಳು ಹಾಗೂ ಶಾಲೆಗಳ ಕ್ಯಾಂಟೀನ್‌ಗಳಲ್ಲಿ ಆರೋಗ್ಯಕರ ಆಹಾರವನ್ನು ಮಾತ್ರ ಕನಿಷ್ಠ ದರದಲ್ಲಿ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ. ಜಂಕ್ ಫುಡ್ ಮಾರಾಟಕ್ಕೆ ಅವಕಾಶ ನೀಡದಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಬಗ್ಗೆ ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದು ಸಚಿವ ಯು.ಟಿ. ಖಾದರ್ ಹೇಳಿದರು.






