ಬೆಂಗಳೂರು:ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 17.61 ಲಕ್ಷ ರೈತರಿಗೆ ₹2021.17 ಕೋಟಿ ಮೊತ್ತದ ಬೆಳೆ ವಿಮೆ ಪರಿಹಾರ ನೀಡಲಾಗಿದೆ’ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು.
ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆಯ ಬಳಿಕ ಮಾತನಾಡಿದ ಅವರು, ‘ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 22.97 ಲಕ್ಷ ರೈತರು 17.60 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ಬೆಳೆ ವಿಮೆ ನೋಂದಣಿ ಮಾಡಿಕೊಂಡಿದ್ದಾರೆ.ಹಿಂಗಾರು ಹಂಗಾಮಿನಲ್ಲಿ ಈವರೆಗೆ 25,148 ರೈತರು 31,690 ಹೆಕ್ಟೇರ್ ಪ್ರದೇಶಕ್ಕೆ ನೋಂದಣಿ ಮಾಡಿಸಿದ್ದಾರೆ’ ಎಂದರು.
‘ಬೀಜೋತ್ಪಾದನಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಜೈವಿಕ ನಿಯಂತ್ರಣ, ಪರವಾಲಂಬಿ ಜೀವಿ ಪ್ರಯೋಗಾಲಯಗಳನ್ನು ಒಂದೇ ಸೂರಿನಡಿ ತಂದು ಅಭಿವೃದ್ಧಿ ಪಡಿಸಲು ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪಿಸಲಾಗುವುದು’ ಎಂದು ತಿಳಿಸಿದರು.