ಮೈಸೂರು : ಲಿಂಗಾಯತ(Lingayat) ಅಧಿಕಾರಿಗಳಿಗೆ ಕಡೆಗಣಿಸಲಾಗುತ್ತಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ (Shamanur Shivashankarappa) ಹೇಳಿಕೆ ರಾಜ್ಯ ಕಾಂಗ್ರೆಸ್ನಲ್ಲಿ (Congress) ಸಂಚಲನ ಸೃಷ್ಟಿಸಿದೆ. ಶಾಮನೂರು ಅವರ ಹೇಳಿಕೆಯಿಂದ ರಾಜ್ಯ ನಾಯಕರಿಗೆ ಇರಿಸುಮುರಿಸು ಉಂಟುಮಾಡಿದೆ. ಇಷ್ಟೇ ಅಲ್ಲದೆ ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ವಿರೋಧ ಪಕ್ಷದ ನಾಯಕರು ಮತ್ತು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಧ್ವನಿಗೂಡಿಸಿದ್ದು ಸರ್ಕಾರವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ಆದರೆ ಇದಾವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾತ್ರ ತಲೆಕೆಡಿಸಿಕೊಂಡಿಲ್ಲ.
ಈ ಮಧ್ಯೆ ಮೈಸೂರಿನ ಕಲಾಮಂದಿರದಲ್ಲಿ ಇಂದು (ಅ.07) ಆಯೋಜಿಸಲಾಗಿರುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ. ಅಖಿಲ ಭಾರತ ವೀರಶೈವ ಮಹಾಸಭಾ ಲಿಂಗಾಯತ ಸಂಘ, ಸಂಸ್ಥೆಗಳು ಮತ್ತು ಬಸವ ಬಳಗಗಳ ಒಕ್ಕೂಟದಿಂದ ಬಸವ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಸರ್ವಪಕ್ಷದ ಲಿಂಗಾಯತ ನಾಯಕರು ಪಾಲ್ಗೊಳ್ಳಲಿದ್ದಾರೆ. ಬಸವ ಜಯಂತಿ ಕಾರ್ಯಕ್ರಮದ ಮೆರವಣಿಗೆಗೆ ಬಿಎಸ್ ಯಡಿಯೂರಪ್ಪ ಪುತ್ರ, ಶಾಸಕ ಬಿವೈ ವಿಜಯೇಂದ್ರ ಚಾಲನೆ ನೀಡಲಿದ್ದಾರೆ.