![](https://pratidhvani.com/wp-content/uploads/2024/05/BHAVANI-REVANNA-1.png)
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಾಯಿ ಭವಾನಿ ರೇವಣ್ಣ ಬಂಧನ ಭೀತಿಯಲ್ಲಿದ್ದಾರೆ. ಮೈಸೂರು ಜಿಲ್ಲೆಯ ಕೆ.ಆರ್. ನಗರ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ.ಕೆ.ಆರ್. ನಗರ ಠಾಣೆಯಲ್ಲಿ ಮಹಿಳೆಯ ಅಪಹರಣ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿಗೆ ಹಸ್ತಾಂತರ ಮಾಡಲಾಗಿದೆ.
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆ ಅಪಹರಣ ಆರೋಪವನ್ನು ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಹೊತ್ತಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ನೋಟಿಸ್ ನೀಡಿದೆ. ಆದರೆ ಭವಾನಿ ಅವರು ತಲೆಮರೆಸಿಕೊಂಡಿದ್ದಾರೆ. ಅವರಿಗೆ ಎಸ್ಐಟಿ ತಂಡ ಹುಡುಕಾಟ ನಡೆಸುತ್ತಿದೆ.
![](https://pratidhvani.com/wp-content/uploads/2024/05/bhavani-revanna-1-1024x576.webp)
ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಪರ ವಕೀಲರು ಜನಪ್ರತಿನಿಧಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಆದರೆ ಶುಕ್ರವಾರ ಅರ್ಜಿ ವಜಾಗೊಂಡಿದೆ. ಈ ಹಿನ್ನೆಲೆಯಲ್ಲಿ ಬಂಧನ ಭೀತಿಯಿಂದ ಪ್ರಜ್ವಲ್ ತಾಯಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಸೋಮವಾರ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.