ನವದೆಹಲಿ: ಏ.೦9: ರಾಜ್ಯ ವಿಧಾನಸಭೆ ಚುನಾವಣೆಗೆ (Assembly Election 2023) ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಬಿಜೆಪಿ (BJP) ಪ್ರಕ್ರಿಯೆ ಮುಂದುವರೆದಿದ್ದು, ಪಟ್ಟಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ. ಕೇಸರಿ ಹುರಿಯಾಳುಗಳ ಪಟ್ಟಿ ಬಿಡುಗಡೆಗಾಗಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಕೇಂದ್ರ ಚುನಾವಣಾ ಸಮಿತಿ (Central Election Committee) ಸಭೆ ನಡೆಸಿದ್ದು, ಇಂದು ರಾತ್ರಿ ಅಥವಾ ನಾಳೆಯೊಳಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ.
ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಪಕ್ಷದ ಜಿಲ್ಲೆ, ತಾಲೂಕು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಂದ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಿಸಿದ್ದ ವರದಿಯನ್ನ ರಾಜ್ಯ ಮಟ್ಟದ ನಾಯಕರು ಪರಿಶೀಲನೆ ನಡಸಿದ್ದಾರೆ. ಅಂತಿಮಗೊಳಿಸಿದ ಪಟ್ಟಿಯನ್ನು ಹೈಕಮಾಂಡ್ ಗೆ ಕಳುಹಿಸಿಕೊಡಲಾಗಿತ್ತು.

ಇಂದು ನಡೆದ ಇಸಿಇ ಸಭೆಯಲ್ಲಿ ಈ ಪಟ್ಟಿಯ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸೇರಿದಂತೆ ರಾಜ್ಯದ ಹಲವು ನಾಯಕರು ಭಾಗವಹಿಸಿದ್ದಾರೆ.