
ಬೆಂಗಳೂರು:ಮೂಡಾ ಪ್ರಕರಣ ಸಂಬಂಧ ಹೈಕೋರ್ಟ್ ತೀರ್ಪಿನ ಬೆನ್ನಲ್ಲೇ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಹಾಕಿದ ರಿಟ್ ಅರ್ಜಿ ಸಂಬಂಧ ನ್ಯಾಯಾಧೀಶರು ಇಂದು ಆದೇಶ ನೀಡಿದ್ದಾರೆ. ಇದನ್ನು ನಾನು ಮಾಧ್ಯಮಗಳ ಮೂಲಕ ನೋಡಿದ್ದೇನೆ.ಕೋರ್ಟ್ ಆದೇಶ ಪ್ರತಿ ಓದಿದ ಬಳಿಕ ಪೂರ್ಣ ಪ್ರತಿಕ್ರಿಯೆ ಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.

ದೂರುದಾರ ತನ್ನ ದೂರಿನಲ್ಲಿ ಸೆಕ್ಷನ್ 218 ಬಿಎನ್ ಎಸ್ ಎಸ್, 17 ಎ ಮತ್ತು 19 ಪಿಸಿ ಕಾಯಿದೆ ಪ್ರಕಾರ ತನಿಖೆ ಹಾಗೂ ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದ್ದರು ಆದರೆ ರಾಜ್ಯಪಾಲರು ಪ್ರಾಥಮಿಕ ಹಂತದಲ್ಲಿ 19 ಪಿಸಿ ಕಾಯಿದೆ ಪ್ರಕಾರ ಕೇಳಿದ್ದ ಅಭಿಯೋಜನಾ ಅನುಮತಿ ನಿರಾಕರಿಸಿದ್ದರು.ಈ ದಿನ ಘನ ನ್ಯಾಯಾಲಯ ರಾಜ್ಯಪಾಲರು 218 ಬಿಎನ್ ಎಸ್ ಎಸ್ ಪ್ರಕಾರ ನೀಡಿರುವ ಅಭಿಯೋಜನಾ ಅನುಮತಿಯನ್ನು ಸ್ಪಷ್ಟವಾಗಿ ತಳ್ಳಿ ಹಾಕಿದೆ ಎಂದು ಹೇಳಿದರು.
ಈ ಕುರಿತು ಹೇಗೆ ಹೋರಾಟ ಮಾಡುವುದಾಗಿ ಕಾನೂನು ತಜ್ಞರ ಜೊತೆ ಚರ್ಚಿಸಿ ಮುಂದಿನ ಕ್ರಮ ನಿರ್ಧರಿಸುತ್ತೇನೆ. ಬಿಜೆಪಿ ಹಾಗೂ ಜೆಡಿಎಸ್‌ನ ಒಳಸಂಚು ಹಾಗೂ ರಾಜ್ಯಪಾಲರ ದುರ್ಬಳಕೆಗೆ ನಾನು ಹೆದರುವವನಲ್ಲ. ಯಾಕೆಂದರೆ ಕರ್ನಾಟಕದ ಜನ ಪಾರ್ಟಿ ಹಾಗೂ ನನ್ನ ಜೊತೆ ಇದ್ದಾರೆ. ಕಾನೂನು ರೀತಿಯಲ್ಲಿ ಎಲ್ಲಾ ರೀತಿಯ ಸಹಕಾರವನ್ನು ಹೈಕಮಾಂಡ್ ಕೂಡ ಕೊಡುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೋದಿ ನೇತೃತ್ವದ ಬಿಜೆಪಿ ಸರ್ಕಾರ ನನ್ನ ಮೇಲಷ್ಟೇ ಅಲ್ಲ ಇಡೀ ದೇಶದ ಮೇಲೆ ಸೇಡಿನ ರಾಜಕೀಯ ಮಾಡುತ್ತದೆ. ಬಿಜೆಪಿ ಅಧಿಕಾರಕ್ಕೆ ಬಂದಿರುವುದೇ ಹಿಂಬಾಗಿಲಿನಿಂದ. ನಮ್ಮ ಶಾಸಕರು ಯಾರೂ ದುಡ್ಡಿನ ಹಿಂದೆ ಹೋಗಿಲ್ಲ. ನಾನು ಬಡವರ ಪರವಾಗಿದ್ದೇನೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದೇನೆ ಎನ್ನುವ ಕಾರಣಕ್ಕಾಗಿ ನನ್ನ ವಿರುದ್ದ ಬಿಜೆಪಿ, ಜೆಡಿಎಸ್ ರಾಜಕೀಯ ಪ್ರತಿಕಾರಕ್ಕೆ ಇಳಿದಿದೆ ಎಂದು ಕಿಡಿಕಾರಿದರು.




