ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕೇಳಿಬಂದಿರುವ 40 % ಕಮಿಷನ್ ಭ್ರಷ್ಟಾಚಾರದ ವಿರುದ್ಧ ಈಗ ಪ್ರತಿಪಕ್ಷಗಳು ಸರ್ಕಾರಕ್ಕೆ ಚಾಟಿ ಬೀಸಲು ಆರಂಭಿಸಿವೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಹೊರಗೆ ಕಾಂಗ್ರೆಸ್ ಪಕ್ಷ ಬಿಜೆಪಿ ಸರ್ಕಾರದ 40 % ಕಮಿಷನ್ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನಾ ಮೆರವಣಿಗೆಯನ್ನು ಇಂದು ಬೆಳಗ್ಗೆ ನಡೆಸಿತು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಬೆಳಗಾವಿ ಗ್ರಾಮೀಣ ಜಿಲ್ಲೆ ಕಾಂಗ್ರೆಸ್ ಕಚೇರಿಯಿಂದ ಸುವರ್ಣಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಈ ವೇಳೆ ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಇತರರು ಇದ್ದರು.