ರಾಮನಗರ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಗಾಳಿ ಸುದ್ದಿಯ ನಡುವೆಯೇ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿಕೆ ಇಂಬು ನೀಡಿದೆ. ರಾಮನಗರದಲ್ಲಿ ಈ ಬಗ್ಗೆ ಮಾತನಾಡಿದ ಸಿಪಿವೈ, ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನವನ್ನು ಗೆಲ್ಲಬೇಕಿದೆ. ಒಂದಷ್ಟು ರಾಜಕೀಯ ಬದಲಾವಣೆಯ ಜೊತೆಗೆ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.

ಈ ನಿಟ್ಟಿನಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂದುಕೊಂಡಿದ್ದೇನೆ. ಈ ಬಗ್ಗೆ ಪಕ್ಷ ವರಿಷ್ಠರು ತೀರ್ಮಾನ ಮಾಡುತ್ತಾರೆ. ಈಗಾಗಲೇ ಈ ವಿಚಾರವಾಗಿ ಮಾಧ್ಯಮಗಳಲ್ಲಿ ಚರ್ಚೆಯಾಗುತ್ತಿದೆ. ಈ ನಿಟ್ಟಿನಲ್ಲಿ ಹೊಂದಾಣಿಕೆ ಆಗಬಹುದು ಎಂದು ಮಾರ್ಮಿಕವಾಗಿ ನುಡಿದಿದ್ಧಾರೆ.

ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಪ್ರತಿಕ್ರಿಯಿಸಿ ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನಿಸುತ್ತಾರೆ. ಹೈಕಮಾಂಡ್ ಸೂಚಿಸಿದರೆ ಸ್ಪರ್ಧೆ ಮಾಡುತ್ತೇನೆ ಎಂದು ರಾಮನಗರದಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ತಿಳಿಸಿದ್ಧಾರೆ.